Karwar| ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಕ್ಯಾಬಿನೆಟ್ ಅನುಮೋದನೆ ನೀಡಿದೆ.
ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 200 ಹಾಸಿಗೆಗಳ ಸಾಮರ್ಥ್ಯದ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು ರೂ.100 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಇನ್ನು ಕಾರವಾರ ಬಂದರಿನ ತೈಲ ಸೋರಿಕೆ ತುರ್ತು ನಿರ್ವಹಣಾ ಯೋಜನೆ (OSCP)ಯನ್ವಯ ತೈಲ ಸೋರಿಕೆ ಪ್ರತಿಕ್ರಿಯೆ ಉಪಕರಣಗಳನ್ನು (OSR equipment’s) ರೂ.13 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಜೋಯಿಡಾ ತಾಲ್ಲೂಕು ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗಳ ರೂ.10.61 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
