Karwar| ರಾಷ್ಟ್ರೀಯ ಹೆದ್ದಾರಿ 66ರ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕರ ಓಡಾಟಕ್ಕೆ ಯಾವುದೇ ತೊಂದರೆಯಾಗದಂತೆ ಅಮ್ಮನವರ ಹೊರೆಯನ್ನು ಇಡಲಾಗುವ ಮುರಿನಕಟ್ಟೆಗೆ ಪರ್ಯಾಯ ಸೂಕ್ತ ಸ್ಥಳವನ್ನು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಟ್ಕಳ ನಗರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿ ವೇಳೆ ಮುರಿನಕಟ್ಟೆಯ ಸ್ಥಳಾಂತರದ ಅಗತ್ಯತೆ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ವತಿಯಿಂದ ಸೂಕ್ತ ಪರ್ಯಾಯ ಸ್ಥಳವನ್ನು ಗುರುತಿಸುವ ಪ್ರಕ್ರಿಯೆ ಕೈಗೊಳ್ಳಲಾಯಿತು. ನಗರದ ವಿವಿಧ ಸಮುದಾಯಗಳ ಹಿರಿಯ ನಾಗರಿಕರು ಹಾಗೂ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಎಲ್ಲರ ಒಮ್ಮತದ ಅಭಿಪ್ರಾಯದ ಮೇರೆಗೆ ಪರ್ಯಾಯ ಸ್ಥಳವನ್ನು ಅಂತಿಮಗೊಳಿಸಲಾಗಿದೆ.
ಅದರಂತೆ, ಪ್ರಸ್ತುತ ಅಮ್ಮನವರ ಹೊರೆಯನ್ನು ಇಡಲಾಗುತ್ತಿರುವ ಅದೇ ರಸ್ತೆಯ ಮಿಡಿಯನ್ಗಾಗಿ ಲಭ್ಯವಿರುವ ಸ್ಥಳವನ್ನು ಪರ್ಯಾಯ ಸ್ಥಳವಾಗಿ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ. ಸ್ಥಳೀಯ ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಳದಲ್ಲಿ ಮಿಡಿಯನ್ ಹಾಗೂ ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಮುಖಂಡರೊಂದಿಗೆ ಜಿಲ್ಲಾಡಳಿತ ಸಮಾಲೋಚನೆ ಆರಂಭಿಸಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
