Dandeli| ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ದಾಂಡೇಲಿ ತಾಲೂಕಿನ ಬಡಕಾಣಶಿಡಾ ಮತ್ತು ಸಾಕ್ಷಳಿ ಗ್ರಾಮಗಳ ನಡುವಿನ ಸಂಪರ್ಕ ಸೇತುವೆ ಭಾರಿ ಮಳೆಗೆ ಭಾಗಶಃ ಕುಸಿದಿದೆ.

ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯ ಪರಿಣಾಮ ಸೇತುವೆಯ ಒಂದು ಭಾಗ ಸಂಪೂರ್ಣವಾಗಿ ಮುರಿದಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇದರಿಂದ ಎರಡು ಗ್ರಾಮಗಳ ಜನರು ಸಂಚಾರಕ್ಕಾಗಿ ಪರದಾಡುವಂತಾಗಿದೆ. ಗ್ರಾಮಸ್ಥರ ಪ್ರಕಾರ, ಈ ಸೇತುವೆ ಹಲವು ದಿನಗಳಿಂದ ಶಿಥಿಲಾವಸ್ಥೆಯಲ್ಲಿತ್ತು. ನೂತನ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೂ ಈ ವಿಷಯವನ್ನು ತರಲಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದ್ದಾರೆ.

ಪ್ರತಿನಿತ್ಯ ಶಾಲೆ, ಕಾಲೇಜು ಹಾಗೂ ವಿವಿಧ ಕೆಲಸಗಳಿಗಾಗಿ ಸಂಚರಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಇದೇ ಸೇತುವೆಯನ್ನು ಅವಲಂಬಿಸಿದ್ದು, ಸೇತುವೆ ಕುಸಿತದಿಂದ ಅವರ ಓಡಾಟಕ್ಕೆ ತೀವ್ರ ತೊಂದರೆ ಉಂಟಾಗಿದೆ.

ಪ್ರಸ್ತುತ ಸೇತುವೆ ಭಾಗಶಃ ಕುಸಿದಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾದರೆ ಸೇತುವೆ ಸಂಪೂರ್ಣವಾಗಿ ಕೊಚ್ಚಿಹೋಗುವ ಸಾಧ್ಯತೆಯಿದೆ ಎಂಬ ಆತಂಕ ವ್ಯಕ್ತವಾಗಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಪರ್ಯಾಯ ಸಂಚಾರ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.