Karwar: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ₹59.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಕೇಂದ್ರ ರಸ್ತೆ ಅಭಿವೃದ್ಧಿ ನಿಧಿ (CRIF) 2026-27ನೇ ಸಾಲಿನ ಯೋಜನೆಯಡಿ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಆಯ್ದ ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಈ ಅನುದಾನವನ್ನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಪ್ರಮುಖ ರಸ್ತೆಗಳಿಗೆ ಅಗತ್ಯವಿರುವ ಸುಧಾರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಈ ಅನುದಾನ ಬಳಕೆಯಾಗಲಿದೆ ಎಂದು ಸಂಸದರು ತಿಳಿಸಿದ್ದಾರೆ.

ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರಕ್ಕೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿನಂದನೆ ಸಲ್ಲಿಸಿದ್ದಾರೆ.