Haliyal | ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದ ನಾಡ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ವಸಂತ @ ವಾಸು ರಾಯಪ್ಪ ಕೊರವರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಜೂ.22ರಂದು ಕಾಳಗಿನಕೊಪ್ಪ ಗ್ರಾಮದ ವಸಂತ ಕೊರವರ ತನ್ನ ಮನೆಯಲ್ಲಿ ಸ್ಫೋಟಕ ವಸ್ತು, ನಾಡ ಬಾಂಬ್ಗಳನ್ನು ಸಂಗ್ರಹಿಸಿಟ್ಟಿದ್ದ ವೇಳೆ ಬೆಳಿಗ್ಗೆ ಸುಮಾರು 5.10ರ ಸಮಯದಲ್ಲಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಆರೋಪಿಯ ಮನೆ, ಮನೆಯ ಮೇಲ್ಛಾವಣಿಯ ಹಂಚುಗಳು, ಅಡುಗೆ ಮನೆಯ ಕಿಟಕಿ ಗಾಜು ಹಾಗೂ ಸುತ್ತಮುತ್ತಲಿನ ಮನೆಗಳ ಹಂಚು, ಬಾಗಿಲುಗಳಿಗೆ ಹಾನಿಯಾಗಿದ್ದು, ಸುಮಾರು ₹1.15 ಲಕ್ಷ ಮೌಲ್ಯದ ಆಸ್ತಿ ನಷ್ಟ ಸಂಭವಿಸಿತ್ತು.
ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಪತ್ತೆಗಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ದಾಂಡೇಲಿ ಉಪವಿಭಾಗದ ಡಿವೈಎಸ್ಪಿ ಶಿವಾನಂದ ಮದರಖಂಡಿ ಅವರ ಮಾರ್ಗದರ್ಶನದಲ್ಲಿ ಹಳಿಯಾಳ ಸಿಪಿಐ ಜಯಪಾಲ ಪಾಟೀಲ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.
ತನಿಖಾ ತಂಡವು ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ, ಜೂ.24ರಂದು ಹುಬ್ಬಳ್ಳಿಯ ತಾರಿಹಾಳ ಗ್ರಾಮದ ಬಸ್ ನಿಲ್ದಾಣದ ಬಳಿ ಆರೋಪಿ ವಸಂತ ಕೊರವರನನ್ನು ವಶಕ್ಕೆ ಪಡೆದು ಬಂಧಿಸಿದೆ. ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹಳಿಯಾಳದ ಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ತನಿಖೆ ಮುಂದುವರಿದಿದೆ.
