Karwar: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂನ್ 30ರ ಮಧ್ಯಾಹ್ನ 1 ಗಂಟೆಯಿಂದ ಜುಲೈ 2ರ ಬೆಳಿಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಮುಂಗಾರು ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈಗಾಗಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರವನ್ನು ತೆರೆಯಲಾಗಿದ್ದು, ಸಾರ್ವಜನಿಕರು ಹವಾಮಾನ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳ ಸಾಮಾಜಿಕ ಜಾಲತಾಣ ಹಾಗೂ ಸ್ಥಳೀಯ ಸುದ್ದಿಮಾಧ್ಯಮಗಳ ಮೂಲಕ ಮಾಹಿತಿ ಪಡೆಯುವಂತೆ ಸೂಚಿಸಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ: ಆರೆಂಜ್ ಅಲರ್ಟ್ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳಿ ಮೀನುಗಾರಿಕೆ ನಡೆಸದಂತೆ ಜಿಲ್ಲಾಡಳಿತ ಸೂಚಿಸಿದೆ.

ಸಾರ್ವಜನಿಕರಿಗೆ ಮುನ್ನೆಚ್ಚರಿಕೆ: ತಗ್ಗು ಪ್ರದೇಶ, ಕೆರೆ, ನದಿ ತೀರ ಹಾಗೂ ಸಮುದ್ರ ತೀರಗಳಿಗೆ ಸಾರ್ವಜನಿಕರು ಮತ್ತು ಮಕ್ಕಳು ತೆರಳದಂತೆ ಎಚ್ಚರಿಕೆ ವಹಿಸಬೇಕು. ಪ್ರವಾಸಿಗರು ನದಿ ಹಾಗೂ ನೀರಿರುವ ಪ್ರದೇಶಗಳಿಗೆ ಇಳಿಯಬಾರದು. ಮಳೆ, ಗುಡುಗು-ಸಿಡಿಲಿನ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಂದ ದೂರವಿದ್ದು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಬೇಕು. ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು ಹಾಗೂ ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ಹಳೆಯ ಹಾಗೂ ದುರ್ಬಲ ಕಟ್ಟಡಗಳು, ಗೋಡೆಗಳು ಅಥವಾ ಮರಗಳ ಕೆಳಗೆ ನಿಲ್ಲಬಾರದು. ಮಳೆಯಿಂದ ಅಪಾಯ ಉಂಟಾಗಬಹುದಾದ ತಗ್ಗು ಪ್ರದೇಶಗಳಲ್ಲಿ ಅಥವಾ ಶಿಥಿಲಾವಸ್ಥೆಯ ಮನೆಗಳಲ್ಲಿ ವಾಸಿಸುವವರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ. ಅಗತ್ಯವಿದ್ದಲ್ಲಿ ತಹಶೀಲ್ದಾರರಿಂದ ಗುರುತಿಸಲಾದ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ತಿಳಿಸಲಾಗಿದೆ.

ಗ್ರಾಮೀಣ ಭಾಗದ ಕಾಲುಸಂಕ, ಕಿರು ಸೇತುವೆಗಳನ್ನು ದಾಟುವಾಗ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಶಿಥಿಲಾವಸ್ಥೆಯಲ್ಲಿರುವ ಮನೆ, ಕಂಪೌಂಡ್ ಗೋಡೆ ಅಥವಾ ಕುಸಿತದ ಅಪಾಯ ಇರುವ ಕಟ್ಟಡಗಳ ಬಗ್ಗೆ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಕೋರಲಾಗಿದೆ.

ತುರ್ತು ಸಂಪರ್ಕ: ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ: 08382-229857 ವಾಟ್ಸಪ್ ಸಂಖ್ಯೆ: 9483511015
ಸಾರ್ವಜನಿಕರು ಮಳೆ-ಗಾಳಿ ಸಂದರ್ಭಗಳಲ್ಲಿ ಎಚ್ಚರಿಕೆಯಿಂದಿದ್ದು, ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಲಕ್ಷ್ಮಿಪ್ರಿಯ ಮನವಿ ಮಾಡಿದ್ದಾರೆ.