ಅಂಕೋಲಾ: ಪಣಜಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಅವರ್ಸಾ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಇಂದು ಗುರುವಾರ ಬೆಳಗ್ಗೆ ಸಂಭವಿಸಿದೆ.

 ಸೀಬರ್ಡ ಸಂಸ್ಥೆಗೆ ಸೇರಿದ ಖಾಸಗಿ ಬಸ್ಸು ಬೆಂಗಳೂರಿನಿಂದ ಗೋವಾ (GA-08 V8743) ಕಡೆಗೆ ತೆರಳುತ್ತಿತ್ತು. ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ. ಆದರೆ ರಸ್ತೆ ಪಕ್ಕದಲ್ಲೇ ಮರ ಇದ್ದುದರಿಂದ ಹೆಚ್ಚಿನ ಅಪಘಾತ ಸಂಭವಿಸಿಲ್ಲ. ಬಸ್‌ನಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರೆನ್ನಲಾಗಿದೆ. ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದ ಕಾರಣ ಹಾಗೂ ಪಲ್ಟಿಯಾದ ಬಸ್‌ಗೆ ಮರ ತಡೆಯಾಗಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ಸ್ಥಳೀಯರು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

 ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಕೈಗೊಂಡಿದ್ದಾರೆ.