Karwar| ಜಿಲ್ಲೆಯಲ್ಲಿನ ಸಹಕಾರಿ ಸಂಘಗಳು ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳ ಕಾರ್ಯಚಟುವಟಿಕೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿ, ಸಾರ್ವಜನಿಕರ ಠೇವಣಿ ಹಣ ಸುರಕ್ಷಿತವಾಗಿರುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಕೆಲವು ಸಹಕಾರಿ ಸಂಘಗಳಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳಿಂದ ಸಾರ್ವಜನಿಕರು ತಮ್ಮ ಠೇವಣಿ ಹಣ ಕಳೆದುಕೊಂಡಿರುವ ಘಟನೆಗಳು ನಡೆದಿವೆ. ಇಂತಹ ಘಟನೆಗಳು ಮರುಕಳಿಸದಂತೆ ಸಹಕಾರಿ ಸಂಘಗಳು ಮತ್ತು ಬ್ಯಾಂಕ್‌ಗಳ ಕಾರ್ಯನಿರ್ವಹಣೆಯನ್ನು ನಿಯಮಿತವಾಗಿ ಪರಿಶೀಲಿಸಿ, ಆರ್ಥಿಕ ವ್ಯವಹಾರಗಳ ಮೇಲೆ ನಿರಂತರ ನಿಗಾ ವಹಿಸಬೇಕು ಎಂದು ನಿರ್ದೇಶಿಸಿದರು.

ಮುಂಡಗೋಡು, ಹಳಿಯಾಳ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಖಾಸಗಿ ಫೈನಾನ್ಸ್ ಸಂಸ್ಥೆಗಳ ವಿರುದ್ಧ ದೂರುಗಳು ಕೇಳಿಬರುತ್ತಿವೆ. ಈ ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಾರ್ಗಸೂಚಿಗಳನ್ನು ಪಾಲಿಸುತ್ತಿವೆಯೇ, ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿವೆಯೇ ಹಾಗೂ ವಿಧಿಸುತ್ತಿರುವ ಬಡ್ಡಿದರಗಳು ನಿಯಮಾನುಸಾರವಿದೆಯೇ ಎಂಬುದನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಅಥವಾ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹಣಕಾಸು ಸಂಸ್ಥೆಗಳು ಕಂಡುಬಂದರೆ ಅವುಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಂಡು ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸಾರ್ವಜನಿಕರು ಸುರಕ್ಷಿತ ಹಣಕಾಸು ವ್ಯವಹಾರ ನಡೆಸುವ ಕುರಿತು ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು. ಸಹಕಾರಿ ಸಂಘಗಳ ವಿರುದ್ಧ ದಾಖಲಾಗುವ ಆರ್ಥಿಕ ಅವ್ಯವಹಾರಗಳ ದೂರುಗಳನ್ನು ನಿಗದಿತ ಅವಧಿಯೊಳಗೆ ವಿಲೇವಾರಿ ಮಾಡಿ, ಸಾರ್ವಜನಿಕರ ಠೇವಣಿ ಹಣಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಸಹಕಾರಿ ಸಂಘಗಳ ಉಪ ನಿಬಂಧಕಿ ತೇಜಸ್ವಿನಿ ಗೌಡ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ರಾಜಪ್ಪ ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳ ಸಹಕಾರಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.