Karwar| ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಕಾನಸ್ಟೇಬಲ್‌ಗಳ ವಿರುದ್ಧ 18 ವರ್ಷದ ಯುವತಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಕರಣದಲ್ಲಿ ದಾಂಡೇಲಿ ಪಟ್ಟಣ ಪೊಲೀಸ್ ಠಾಣೆಯ ಕಾನಸ್ಟೇಬಲ್‌ಗಳಾದ ಇಮ್ರಾನ್ ಹಾಗೂ ಮಾಂತೇಶ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ದೂರಿನ ಪ್ರಕಾರ, ಆರೋಪಿತರು ವಾಟ್ಸ್ಆಪ್ ಹಾಗೂ ಇನ್‌ಸ್ಟಾಗ್ರಾಂ ಮೂಲಕ ಯುವತಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಜುಲೈ 8ರಂದು ರಾತ್ರಿ ಕಾರವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಂಬರ್ ಪ್ಲೇಟ್ ಇಲ್ಲದೇ ವಾಹನ ಚಲಾಯಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ದಾಖಲಾದ ದೂರಿನ ಮುಖಾಂತರ ಆರೋಪಿ ಪೇದೆಗಳಿಬ್ಬರು ಯುವತಿ ಮೊಬೈಲ್ ನಂಬರ್ ಪಡೆದಿದ್ದರು ಎನ್ನಲಾಗಿದೆ.
ಪೊಲೀಸ್ ಸಿಬ್ಬಂದಿಯ ವಿರುದ್ಧವೇ ಪ್ರಕರಣ ದಾಖಲಾಗಿರುವುದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ತನಿಖೆಯ ಬಳಿಕ ಪ್ರಕರಣದ ಸತ್ಯಾಸತ್ಯತೆ ಬೆಳಕಿಗೆ ಬರಬೇಕಿದೆ.
