ಕಾರವಾರ: ಕರ್ನಾಟಕ ಸರ್ಕಾರದ ಮಾಜಿ ವೈದ್ಯಕೀಯ ಶಿಕ್ಷಣ ಸಚಿವರು, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಬಿಜೆಪಿ ಹಿರಿಯ ಮುಖಂಡರಾದ ರಾಮಚಂದ್ರ ಗೌಡರ ನಿಧನಕ್ಕೆ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಶೋಕ ಸಂದೇಶ ಬಿಡುಗಡೆ ಮಾಡಿರುವ ಅವರು, “ರಾಮಚಂದ್ರ ಗೌಡರು ರಾಜಕೀಯದ ಜೊತೆಗೆ ಸಮಾಜಸೇವೆಯಲ್ಲಿಯೂ ವಿಶಿಷ್ಟ ಸೇವೆ ಸಲ್ಲಿಸಿ ಜನಪ್ರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು. ನೇರ ನಡೆನುಡಿಯ ವ್ಯಕ್ತಿತ್ವ ಹೊಂದಿದ್ದ ಅವರು ಜನಾನುರಾಗಿಯಾಗಿದ್ದರು” ಎಂದು ತಿಳಿಸಿದ್ದಾರೆ.

“ರಾಮಚಂದ್ರ ಗೌಡರು ನನಗೆ ಅತ್ಯಂತ ಆತ್ಮೀಯರಾಗಿದ್ದರು. ಅವರ ನಿಧನದಿಂದ ರಾಜ್ಯವು ಒಬ್ಬ ಅನುಭವಿ ಹಾಗೂ ಮುತ್ಸದ್ದಿ ರಾಜಕಾರಣಿಯನ್ನು ಕಳೆದುಕೊಂಡು ಬಡವಾಗಿದೆ. ಅವರ ಅಗಲಿಕೆ ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟವಾಗಿದೆ” ಎಂದು ಕಾಗೇರಿ ಹೇಳಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ಸದಸ್ಯರು, ಬಂಧು-ಬಳಗ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಾರ್ಥಿಸಿದ್ದಾರೆ.