ಗೋಕರ್ಣ: ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಶ್ವತ ಪರಿಹಾರಕ್ಕಾಗಿ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ಕುರಿತು ಪರಿವರ್ತನ ಗೋಕರ್ಣ ಸಂಸ್ಥೆ ಸಲ್ಲಿಸಿದ್ದ ಮನವಿ ಪತ್ರ ಹಾಗೂ ದೇವಾಲಯದೊಳಗೆ ನೀರು ನಿಂತಿರುವ ಚಿತ್ರಗಳನ್ನು ಪರಿಶೀಲಿಸಿದ ಡಿ.ಕೆ. ಶಿವಕುಮಾರ್, ಕಾಮಗಾರಿಯನ್ನು ತುರ್ತು ಅಗತ್ಯದ ಕೆಲಸವೆಂದು ಪರಿಗಣಿಸಿ ಕೂಡಲೇ ಕೈಗೆತ್ತಿಕೊಳ್ಳುವಂತೆ ಮನವಿ ಪತ್ರದ ಮೇಲೆಯೇ ಸೂಚನೆ ಬರೆದಿದ್ದಾರೆ.
ದೇವಾಲಯದ ಅಭಿಷೇಕ ತೀರ್ಥ ಹೊರಹೋಗುವ ಸೋಮಸೂತ್ರವು ಸಂಗಮ ನಾಲೆಗೆ ಸೇರುವ ಸ್ಥಳದಲ್ಲಿ ಗೇಟ್ ವಾಲ್ವ್ ಅಳವಡಿಸಿ, ಮಳೆಗಾಲದಲ್ಲಿ ಹೊರಗಿನ ಕೊಳಚೆ ನೀರು ದೇವಾಲಯದ ಒಳಭಾಗಕ್ಕೆ ಪ್ರವೇಶಿಸದಂತೆ ಶಾಶ್ವತ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದೆ.
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಎರಡು ಬಾರಿ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಕೊಳಚೆ ನೀರು ನುಗ್ಗಿ ಭಕ್ತರು ಹಾಗೂ ದೇವಾಲಯ ಆಡಳಿತಕ್ಕೆ ತೊಂದರೆಯಾಗಿತ್ತು. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳ ಹಿನ್ನೆಲೆಯಲ್ಲಿ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
ಸಭೆಯಲ್ಲಿ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ನಿವೇದಿತ್ ಆಳ್ವಾ ಉಪಸ್ಥಿತರಿದ್ದು, ದೇವಾಲಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿವರಿಸಿದರು. ಇದೇ ವೇಳೆ ಮಾಜಿ ಸಚಿವ ಹಾಗೂ ಭಟ್ಕಳ ಶಾಸಕ ಮಂಕಾಳ ವೈದ್ಯ ಗೋಕರ್ಣದ ರಸ್ತೆ ಅಭಿವೃದ್ಧಿ ಮತ್ತು ಕೋಟಿತೀರ್ಥ ಅಭಿವೃದ್ಧಿ ಯೋಜನೆಗಳ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಹಲವು ಬಾರಿ ಗೋಕರ್ಣಕ್ಕೆ ಭೇಟಿ ನೀಡಿ ಶ್ರೀ ಮಹಾಬಲೇಶ್ವರ ದೇವರ ದರ್ಶನ ಪಡೆದಿರುವ ಡಿ.ಕೆ. ಶಿವಕುಮಾರ್, ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಗೇಟ್ ವಾಲ್ವ್ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ನಿವೇದಿತ್ ಆಳ್ವಾ, ಗೋಕರ್ಣ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ವಿಶೇಷ ಕಾಳಜಿ ವಹಿಸಿದ್ದು, ಮೊದಲ ಹಂತವಾಗಿ ದೇವಾಲಯದ ಕೊಳಚೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮಾಜಿ ಸಚಿವ ಹಾಗೂ ಭಟ್ಕಳ ಶಾಸಕ ಮಂಕಾಳ ವೈದ್ಯ ಮಾತನಾಡಿ, ಉಪ ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಂಬಂಧಿತ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಲಿದ್ದು, ಗೋಕರ್ಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಹೊಸ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.
