ಕಾರವಾರ: ಜಿಲ್ಲೆಯಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಕುಮಟಾ ತಾಲೂಕಿನ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿದಿದ್ದು, ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಗುಡ್ಡ ಕುಸಿತದಿಂದ ರಸ್ತೆಯ ಮೇಲೆ ಮಣ್ಣು ಹಾಗೂ ಬಂಡೆಗಳು ಬಿದ್ದಿರುವುದರಿಂದ ಗೋಕರ್ಣ ಮತ್ತು ತದಡಿ ನಡುವಿನ ಸಂಪರ್ಕ ಕಡಿತಗೊಂಡಿದೆ. ಈ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಿದೆ. ರಸ್ತೆ ತೆರವುಗೊಳಿಸಿ ಸಂಚಾರ ಪುನರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಪ್ರದೇಶಗಳಲ್ಲಿ ಸಂಚರಿಸುವವರು ಹಾಗೂ ಈ ಮಾರ್ಗ ಬಳಸುವ ವಾಹನ ಸವಾರರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಮನವಿ ಮಾಡಿದೆ.
