ಕಾರವಾರ: ತಾಲೂಕಿನ ಮಾಜಾಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಬಿಇ ಕಾಲೇಜು ಹಾಗೂ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಮಧ್ಯೆ ಪಿಡಬ್ಲ್ಯೂಡಿ ರಸ್ತೆಯ ಪಕ್ಕದಲ್ಲಿರುವ ಬೃಹತ್ ಮಾವಿನ ಮರ ಯಾವುದೇ ಕ್ಷಣದಲ್ಲಿ ಉರುಳಿ ಬೀಳುವ ಅಪಾಯವಿದ್ದು, ಕೂಡಲೇ ತೆರವುಗೊಳಿಸುವಂತೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಚಂದ್ರಹಾಸ ಡಿ. ಕೋಠಾರಕರ ಅವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಮಳೆ ಹಾಗೂ ಬಿರುಗಾಳಿಯ ಸಂದರ್ಭದಲ್ಲಿ ಮರ ರಸ್ತೆ ಮೇಲೆ ಉರುಳಿ ಬಿದ್ದರೆ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಪ್ರಾಣಾಪಾಯ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಸ್ಥಳವನ್ನು ತಕ್ಷಣ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಂಡು ಅಪಾಯಕಾರಿ ಮರವನ್ನು ತೆರವುಗೊಳಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ನಿರ್ದೇಶನ ನೀಡಬೇಕು ಎಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಈ ವಿಷಯವನ್ನು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಹಲವು ಬಾರಿ ಪ್ರಸ್ತಾಪಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಚಂದ್ರಹಾಸ ಡಿ. ಕೋಠಾರಕರ ಅವರು ಆರೋಪಿಸಿದ್ದಾರೆ.