ಅಂಕೋಲಾ ತಾಲೂಕಿನ ಸುಂಕಸಾಳ ಮೂಲೆಮನೆ ಬಳಿ ಎರಡು ಖಾಸಗಿ ಬಸ್ ಹಾಗೂ ಲಾರಿ ನಡುವೆ ಸರಣಿ ಅಪಘಾತ ನಡೆದ ಪರಿಣಾಮ 8 ಜನ ಗಂಭೀರ, 24 ಮಂದಿ ಗಾಯಗೊಂಡ ಘಟನೆ ನಡೆದಿದೆ.‌

ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ತೀವ್ರತೆಗೆ ವಾಹನಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಂಪಿಯಿಂದ ಗೋವಾ ಕಡೆ ಹೋಗುತ್ತಿದ್ದ ಸಿಬರ್ಡ್ ಬಸ್, ಹುಬ್ಬಳ್ಳಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಗಣೇಶ ಬಸ್‌ ಹಾಗೂ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆ ಚಲಿಸುತ್ತಿದ್ದ ಲಾರಿ ನಡುವೆ ಸರಣಿ ಅಪಘಾತ ಉಂಟಾಗಿದೆ. ಗಂಭೀರವಾಗಿ ಗಾಯಗೊಂಡ ಐವರನ್ನು ಕಾರವಾರ ಕ್ರಿಮ್ಸ್‌ಗೆ ದಾಖಲಿಸಲಾಗಿದ್ದು, ಉಳಿದವರಿಗೆ ಅಂಕೋಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.‌

ಖಾಸಗಿ ಬಸ್ ನಲ್ಲಿ‌ ಸುಮಾರು 12 ವಿದೇಶಿಗರು ಸಹ ಪ್ರಯಾಣಿಸುತ್ತಿದ್ದರು. ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿ-52 ರಲ್ಲಿ ಕಿಲೋ ಮೀಟರ್‌ಗಟ್ಟಲೆ ದೂರದವರೆಗೆ ಸಂಚಾರ ದಟ್ಟಣೆ ಉಂಟಾಯಿತು. ಅರಬೈಲ್ ಘಟ್ಟದಲ್ಲಿಯೂ ಸಹ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸುಮಾರು ಐದು ತಾಸುಗಳವರೆಗೆ ಅರಬೈಲ್‌ ಘಟ್ಟದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿತ್ತು. 

ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿದ್ದು, ತೆರವು ಕಾರ್ಯ ನಡೆಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.