ಕಾರವಾರ: ಅರಗಾದ ನೌಕಾನೆಲೆಯ ಪತಂಜಲಿ ಆಸ್ಪತ್ರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಎಂಟು ವರ್ಷದ ಬಾಲಕ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ವಿಯಾನ ಪ್ರಕಾಶ ವಾಗ್ (8) ಮೃತಪಟ್ಟಿದ್ದಾನೆ.
ಮಹಾರಾಷ್ಟ್ರದ ಕೃಷಿನಗರ ಸಂಗಮಚೌಕ್ ನಿವಾಸಿ ಪ್ರಕಾಶ ವಾಗ್ (48), ತಾಯಿ ಅಮೃತ ವಾಗ್ (38) ಹಾಗೂ ಅಕ್ಕ ಭೂಮಿಕಾ (16) ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ನಾಲ್ವರು ಗೋಕರ್ಣದಿಂದ ಗೋವಾ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದರು. ಇದೇ ವೇಳೆ ಗೋವಾದಿಂದ ಕೇರಳ ಕಡೆಗೆ ಸಾಗುತ್ತಿದ್ದ ಕಂಟೇನರ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡಾದಿಡ್ಡಿಯಾಗಿ ಚಲಿಸಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ತಿರುಗಿ ನಿಂತಿದ್ದು, ಕಂಟೇನರ್ ರಸ್ತೆ ಅಂಚಿನ ಗುಡ್ಡಕ್ಕೆ ಡಿಕ್ಕಿ ಹೊಡೆದು, ಕಾರಿನ ಮೇಲೆಯೇ ಉರುಳಿದೆ. ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರಿನ ಹಿಂಭಾಗದಲ್ಲಿ ಕುಳಿತಿದ್ದ ಬಾಲಕ ವಿಯಾನ ವಾಗ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಗಾಯಗೊಂಡಿದ್ದ ಮೂವರನ್ನು ಸ್ಥಳೀಯರು ಮತ್ತು ಪೊಲೀಸರು ತಕ್ಷಣ ಕಾರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲ ಕಾಲ ಸಂಚಾರ ದಟ್ಟಣೆ ಉಂಟಾಯಿತು. ಈ ಕುರಿತು ಪ್ರಕರಣ ದಾಖಲಾಗಿದೆ.
