Ankola : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕಂಚಿನಬಾಗಿಲು ಸಮೀಪ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ರಾಸಾಯನಿಕ ತುಂಬಿದ ಟ್ಯಾಂಕರ್ ಸ್ಫೋಟಗೊಂಡು ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಸ್ಫೋಟದ ಪರಿಣಾಮ ಟ್ಯಾಂಕರ್ ಸಂಪೂರ್ಣವಾಗಿ ಹೊತ್ತಿ ಉರಿಯುತ್ತಿದ್ದು, ಬೆಂಕಿಯ ತೀವ್ರತೆಯಿಂದಾಗಿ ಸ್ಥಳಕ್ಕೆ ಹತ್ತಿರ ಹೋಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆ ಬಳಿಕ ಟ್ಯಾಂಕರ್ ಚಾಲಕನ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.
ಅಂಕೋಲಾದಿಂದ ಹುಬ್ಬಳ್ಳಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಧಗಧಗಿಸಿ ಉರಿಯುತ್ತಿರುವ ಟ್ಯಾಂಕರ್‌ನಿಂದಾಗಿ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಘಟನಾ ಸ್ಥಳಕ್ಕೆ ಅಂಕೋಲಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
