ಜೋಯಿಡಾ ತಾಲೂಕಿನ ಜಂಗಲ್‌ಬೆಟ್ ಸಮೀಪ ಇಂದು ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ದಾಂಡೇಲಿಯಿಂದ ರಾಮನಗರದ ಕಡೆಗೆ ಬರುತ್ತಿದ್ದ ಬಸ್‌ಗೆ ಗೋಕರ್ಣಕ್ಕೆ ತೆರಳುತ್ತಿದ್ದ ಕೊಲ್ಹಾಪುರ ಮೂಲದ ಯುವಕನ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಬಸ್ ಯುವಕನ ಕಾಲಿನ ಮೇಲೆ ಹರಿದ ಪರಿಣಾಮ ಆತ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಾಯಾಳುವಿಗೆ ತಕ್ಷಣ ರಾಮನಗರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.