ಕಾರವಾರ: ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಸರ್ಕಾರ ಬದ್ದವಾಗಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಶಿಕ್ಷಣ, ಕುಡಿಯುವ ನೀರು, ರಸ್ತೆಗಳು ಸೇರಿದಂತೆ ವಿವಿಧ ಅಭಿವೃಧ್ದಿ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ಅವರು ಸೋಮವಾರ, ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋರಣ ನೆರವೇರಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಪ್ರಥಮಾದ್ಯತೆಯನ್ನು ನೀಡಿದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ರೀತಿ ತೊಂದರೆಯಾದಂತೆ ನೋಡಿಕೊಳ್ಳಲಾಗುತ್ತಿದೆ. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ 24 ಗಂಟೆ ಕುಡಿಯುವ ನೀರು ಸರಬರಾಜು ಮಾಡಲು ರೂ.700 ಕೋಟಿ ವೆಚ್ಚದಲ್ಲಿ ಕುಡಿಯವ ನೀರಿನ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಹೊನ್ನಾವರದ ಶರಾವತಿ ನದಿಗೆ ರೂ.200 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ ಮಂಜೂರಾಗಿದೆ. 13 ಬಂದರುಗಳನ್ನು ರೂ.200 ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿ ಮಾಡಲಾಗುತ್ತಿದೆ. ಪ್ರವಾಸೋದ್ಯಮ ಅಭಿವೃದ್ಧಿ ಪಡೆಸುವ ಉದ್ದೇಶದಿಂದ ಜಿಲ್ಲೆಯ 10 ದ್ವೀಪಗಳನ್ನು ಗುರುತಿಸಲಾಗಿದ್ದು, ಈ ದ್ವೀಪಗಳನ್ನು ಅಭಿವೃದ್ಧಿ ಪಡಸಿ ಸ್ಥಳೀಯರಿಗೆ ಉದ್ಯೋಗ ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಕಾರವಾರದಲ್ಲಿ ಈಗಾಗಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯಾರಂಭವಾಗಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕುರಿತಂತೆ ಈ ಬಾರಿಯ ಬಜೆಟ್ ನಲ್ಲಿ ಘೋಷಣೆಯಾಗಲಿದ್ದು, ಶೀಘ್ರದಲ್ಲಿ ಕಾರ್ಯರಂಭ ಮಾಡಲಿದೆ. ಜಿಲ್ಲೆಯ ಸಂಪೂರ್ಣ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ, ಗೃಹರಕ್ಷಕ ದಳ, ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಪ್ರಶಸ್ತಿ, ಅಂಗಾಂಗ ದಾನ ಮಾಡಿದವರ ಕುಟುಂಬಕ್ಕೆ ಅಭಿನಂದನೆ, ಕೃಷಿ ಪಂಡಿತ ಪ್ರಶಸ್ತಿ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.
ಶಾಲಾ ವಿದ್ಯಾರ್ಥಿಗಳಿಂದ ರಾಷ್ಟ್ರ ಪ್ರೇಮ ಮೂಡಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಸತೀಶ್ ಸೈಲ್, ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ ಎನ್ ಉಪಸ್ಥಿತರಿದ್ದರು.
