ಕಾರವಾರ: ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ (PCPNDT) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ನೋಂದಾಯಿತ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ನಿಯಮಿತವಾಗಿ ಹಾಗೂ ಸಮಗ್ರವಾಗಿ ಪರಿಶೀಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರವಿಧಾನಗಳ (PCPNDT) ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ 82 ನೋಂದಾಯಿತ ಸ್ಕ್ಯಾನಿಂಗ್ ಸೆಂಟರ್‌ಗಳಿದ್ದು, ಸಂಬಂಧಪಟ್ಟ ಅಧಿಕಾರಿಗಳು ಎಲ್ಲ ಕೇಂದ್ರಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪರಿಶೀಲನೆ ವೇಳೆ ಕೇಂದ್ರಗಳಲ್ಲಿ ಕಡ್ಡಾಯವಾಗಿ ನಿರ್ವಹಿಸಬೇಕಾದ ಎಲ್ಲಾ ದಾಖಲಾತಿಗಳು ಸಮರ್ಪಕವಾಗಿವೆಯೇ ಎಂಬುದನ್ನು ಪರಿಶೀಲಿಸುವುದರ ಜೊತೆಗೆ, ಗರ್ಭಧಾರಣಾ ಪೂರ್ವ ಹಾಗೂ ಪ್ರಸವ ಪೂರ್ವ ಲಿಂಗ ಪತ್ತೆ ಚಟುವಟಿಕೆಗಳು ಯಾವುದೇ ರೀತಿಯಲ್ಲಿ ನಡೆಯುತ್ತಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು. ಪ್ರತಿ ಪರಿಶೀಲನೆಯ ನಂತರ ಜಿಪಿಎಸ್ ಆಧಾರಿತ ಛಾಯಾಚಿತ್ರಗಳೊಂದಿಗೆ ಸಮಗ್ರ ವರದಿ ಸಿದ್ಧಪಡಿಸಿ, ಅದನ್ನು ದೃಢೀಕರಿಸಿ ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ್ ದೊಡ್ಡಮನಿ, ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಕ್ರಿಮ್ಸ್‌ನ ಸ್ತ್ರೀರೋಗ ತಜ್ಞ ಡಾ. ನರೇಶ್ ಪಾವಸ್ಕರ್, ಸದಸ್ಯರಾದ ಕ್ರಿಮ್ಸ್‌ನ ಮಕ್ಕಳ ವಿಭಾಗದ ಮುಖ್ಯಸ್ಥ ಹಾಗೂ ಸಹ ಪ್ರಾಧ್ಯಾಪಕ ಡಾ. ಪವನಕುಮಾರ್, ಜಿಲ್ಲಾ ವಾರ್ತಾಧಿಕಾರಿ ಬಿ. ಶಿವಕುಮಾರ್, ವಕೀಲೆ ಸುಧಾರಾಣಿ, ಸಾಮಾಜಿಕ ಕಾರ್ಯಕರ್ತೆ ಯಶೋಧ ಹೆಗಡೆ, ತಪಾಸಣೆ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಿನಿ ಬೋರಕರ, ರೇಡಿಯಾಲಜಿಸ್ಟ್ ಡಾ. ಆಶಿತಾ ಹಾಗೂ ರೋಟರಿ ಕ್ಲಬ್‌ನ ಹೇಮಲಾ ಅಲ್ಫಾನ್ಸೋ ಉಪಸ್ಥಿತರಿದ್ದರು.
