ಮಂಗಳೂರು: ಧಾರಾಕಾರ ಮಳೆಯ ಹಿನ್ನೆಲೆ ನಾಳೆ ಗುರುವಾರ ಜು.2 ರಂದು ದಕ್ಷಿಣ ಕನ್ನಡ ಕ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶಿಸಿದ್ದಾರೆ.

ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಭಾರಿ ಮಳೆಯ ಮುನ್ಸೂಚನೆ ರೆಡ್ – ಅಲರ್ಟ್ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ, ಹೊಳೆ, ಕೆರೆ ಮತ್ತು ಸಮುದ್ರ ತೀರಗಳಿಗೆ ತೆರಳದಂತೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳು ಹಾಗೂ ಜಲಮೂಲಗಳ ಬಳಿ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇದ್ದು, ವಿಪತ್ತು ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡು ಸಾರ್ವಜನಿಕರ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ನಿರ್ದೇಶನ ನೀಡಲಾಗಿದೆ. ಪ್ರತಿ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ಇಲಾಖೆಗಳಿಗೂ ಸೂಚಿಸಲಾಗಿದೆ.

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಪರಿಸ್ಥಿತಿ ಎದುರಾದಲ್ಲಿ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತ ತಿಳಿಸಿದೆ.