Dandeli|ಇಲ್ಲಿನ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಆಸಾಮಿಯನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಬೀದರ್ ಗೆ ಗಡಿಪಾರು ಮಾಡಿ ಆದೇಶಿಸಲಾಗಿದೆ.
ದಾಂಡೇಲಿ ನಗರದ ಬರ್ಚಿ ರಸ್ತೆ, ಜನತಾ ವಿದ್ಯಾಲಯ ಸಮೀಪದ ನಿವಾಸಿ ಬಾಬು ತಂದೆ ರಾಮಪ್ಪ ದೊಡ್ಡಮನಿ (41) ಎಂಬಾತನೇ ಗಡಿಪಾರಾದ ರೌಡಿ ಶೀಟರ್. ಈತನ ವಿರುದ್ಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ 2012ರಿಂದ 2026ರವರೆಗೆ ಒಟ್ಟು 9 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಕೊಲೆ ಯತ್ನ, ದೊಂಬಿ, ಜೂಜಾಟ, ಲೈಂಗಿಕ ದೌರ್ಜನ್ಯ, ಹಲ್ಲೆ ಹಾಗೂ ಎಸ್ಸಿ-ಎಸ್ಟಿ ಕಾಯ್ದೆಯಡಿ ಪ್ರಕರಣಗಳು ಸೇರಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತನ ಚಟುವಟಿಕೆಗಳ ಮೇಲೆ ನಿಗಾ ವಹಿಸಲು ರೌಡಿ ಹಾಳೆ ತೆರೆಯಲಾಗಿತ್ತು. ಆದರೂ ಸಹ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದ ಹಿನ್ನೆಲೆಯಲ್ಲಿ ದಾಂಡೇಲಿ ನಗರ ಪೊಲೀಸ್ ಠಾಣೆ ಪೊಲೀಸರು ಗಡಿಪಾರು ಪ್ರಸ್ತಾವನೆಯನ್ನು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಬಳಿಕ, ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55(ಎ) ಮತ್ತು (ಬಿ) ಅಡಿ ಬಾಬು ದೊಡ್ಡಮನಿಯನ್ನು ಬೀದರ ಜಿಲ್ಲೆಯ ಬೀದರ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಗೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳ ಕಾಲ ಗಡಿಪಾರು ಮಾಡಿ ಆದೇಶಿಸಲಾಗಿದೆ.
ಆದೇಶದಂತೆ ದಾಂಡೇಲಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಬಾಬು ದೊಡ್ಡಮನಿಯನ್ನು ಬೀದರ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಕರೆದೊಯ್ದು ಸಂಬಂಧಪಟ್ಟ ಠಾಣಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ.
