Udupi| ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ರವಿವಾರ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಪತ್ನಿ ಕನ್ನಿಕಾ ಅವರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.                      

ಉಪಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕೊಲ್ಲೂರಿಗೆ ಆಗಮಿಸಿದ ಜಿ.ಪರಮೇಶ್ವರ್ ದಂಪತಿ, ಆರೋಗ್ಯ ಸುಧಾರಣೆಗಾಗಿ ಸಲಹೆ ಮೇರೆಗೆ ಚಂಡಿಕಾ ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಕಳೆದ ಒಂದು ವಾರದಿಂದ ಜಿ.ಪರಮೇಶ್ವರ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಈ ವಿಶೇಷ ಪೂಜೆ ನೆರವೇರಿಸಲಾಯಿತು ಎನ್ನಲಾಗಿದೆ.

ಈ ವೇಳೆ ಬೆಂಗಳೂರು ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಶರತ್ ಬಿ., ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. ಪೂಜೆ ಬಳಿಕ ದೇವಾಲಯದ ಆಡಳಿತಾತ್ಮಕ ವಿಚಾರಗಳ ಕುರಿತು ಪರಿಶೀಲನೆ ನಡೆಸಿದ ಡಿಸಿಎಂ, ಮುಜರಾಯಿ ಇಲಾಖೆಗೆ ಸೇರಿದ ಜಾಗಗಳ ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಲ್ಲೆಲ್ಲಿ ಮುಜರಾಯಿ ಇಲಾಖೆ ಜಾಗ ಒತ್ತುವರಿಯಾಗಿದೆಯೋ ಅದನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಆಯುಕ್ತರು ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೆ, ಕೊಲ್ಲೂರಿಗೆ ಆಗಮಿಸುವ ಯಾತ್ರಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮಾಸ್ಟರ್ ಪ್ಲ್ಯಾನ್ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೂಕಾಂಬಿಕೆ ದರ್ಶನ ಹಾಗೂ ವಿಶೇಷ ಪೂಜೆ ಬಳಿಕ ಮಾತನಾಡಿದ ಜಿ.ಪರಮೇಶ್ವರ್, ದೇವಾಲಯದ ಅಭಿವೃದ್ಧಿ ಹಾಗೂ ಭಕ್ತರ ಅನುಕೂಲಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.