Karwar| ಈ ಬಾರಿಯ ಬೇಸಿಗೆಯಲ್ಲಿ ಜಿಲ್ಲೆಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಿನಿಂದಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸೂಚನೆ ನೀಡಿದರು.
ಅವರು ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳು ಮತ್ತು ನಗರ ಪ್ರದೇಶಗಳಲ್ಲಿ ಈ ಬಾರಿಯ ಬೇಸಿಗೆಯಲ್ಲಿ ಸಮಸ್ಯೆ ಕಂಡು ಬರಬಹುದಾದ ಗ್ರಾಮಗಳ ಪಟ್ಟಿಯನ್ನು ಸಿದ್ದಪಡಿಸಿ, ಈ ಪ್ರದೇಶದಲ್ಲಿ ಕುಡಿಯುವ ನೀರಿನ ಕೊರತೆಯಾಗದಂತೆ, ಖಾಸಗಿ ಬಾವಿಗಳು, ಬಾಡಿಗೆ ಬೋರ್ ವೆಲ್ ಗಳನ್ನು ಬಳಸಿಕೊಳ್ಳುವುದು, ಟ್ಯಾಂಕರ್ ಮೂಲಕ ನೀರಿನ ಸರಬರಾಜು ಸೇರಿದಂತೆ ಇತರೇ ಅಗತ್ಯ ಪರ್ಯಾಯ ಕ್ರಮಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ನಿರ್ದೇಶನ ನೀಡಿದರು.

ಬೇಸಿಗೆ ಸಂದರ್ಭದಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪಶುಪಾಲನಾ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಮಳೆಗಾಲದಲ್ಲಿ ನೆರೆ ಪ್ರವಾಹ ಉಂಟಾಗುವುದನ್ನು ತಡೆಯುವ ನಿಟ್ಟಿನಲ್ಲಿ ಈಗಿನಿಂದಲೇ ಅಗತ್ಯ ದುರಸ್ತಿ, ನಿರ್ಮಾಣ ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸುವ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮುದಗಾ, ಬಿಣಗಾ, ಅರಗಾ, ಚೆಂಡಿಯಾ, ಇಡೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ನೀರು ಸರಾಗವಾಗಿ ಹರಿದುಹೋಗಲು ಯಾವುದೇ ಅಡೆತಡೆಗಳು ಇಲ್ಲದಂತೆ ಅಗತ್ಯವಿರುವ ದುರಸ್ತಿ, ಡ್ರಜ್ಜಿಂಗ್ ಮತ್ತಿತರ ಕಾಮಗಾರಿಗಳನ್ನು ನಗರಸಭೆ, ಸಣ್ಣ ನೀರಾವರಿ ಇಲಾಖೆ ಮತ್ತು ತಹಸೀಲ್ದಾರ್ ಅವರು ಜಂಟಿಯಾಗಿ ಸ್ಥಳ ಪರಿಶೀಲಿಸಿ, ಅಗತ್ಯವಿರುವ ಕಾಮಗಾರಿಗಳನ್ನು ಆದ್ಯತೆಯಲ್ಲಿ ಕೈಗೊಳ್ಳುವಂತೆ ಸೂಚಿಸಿ, ಈ ಕಾಮಗಾರಿಗಳನ್ನು ಕೈಗೊಳ್ಳಲು ಸೀಬರ್ಡ್ ಅಧಿಕಾರಿಗಳು ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಡಿ.ಎಫ್.ಓ ರವಿಶಂಕರ್, ಸೀ ಬರ್ಡ್ ಅಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
