ಮುಂಡಗೋಡ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ರೌಡಿ ಆಸಾಮಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಂಡು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಮುಂಡಗೋಡದ ಗಾಂಧಿನಗರ ನಿವಾಸಿ ಸಂಜು ತಂದೆ ಅರ್ಜುನ್ ನವಲೆ (24) ಎಂಬಾತನ ವಿರುದ್ಧ ದರೋಡೆ, ಕೊಲೆ, ಕೊಲೆ ಯತ್ನ ಸೇರಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿದ್ದವು. ಈತನ ಚಲನವಲನಗಳ ಮೇಲೆ ನಿಗಾ ಇರಿಸಲು 2021ರಲ್ಲಿ ರೌಡಿ ಹಾಳೆ ತೆರೆಯಲಾಗಿತ್ತು. ಆದರೂ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿದ್ದ ಹಿನ್ನೆಲೆಯಲ್ಲಿ ಮುಂಡಗೋಡ ಪೊಲೀಸ್ ಠಾಣೆ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಲು ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತಾವನೆಯನ್ನು ಪರಿಶೀಲಿಸಿದ ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ಜೂ.8ರಂದು ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶ ನೀಡಿದ್ದರು. ಅದರಂತೆ ಜೂ.9ರಂದು ಸಂಜನನ್ನು ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.
ಇದೇ ರೀತಿ ಮುಂಡಗೋಡ ತಾಲೂಕಿನ ಗುಂಜಾವತಿ ಗ್ರಾಮದ ಶಬ್ಬಿರ ತಂದೆ ಸತ್ತಾರಸಾಬ ಮಸ್ತಮದ್ದಾನಿ (34) ಎಂಬಾತನ ಮೇಲೂ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ. ಈತನ ವಿರುದ್ಧ ಹಲ್ಲೆ, ಕೊಲೆ ಯತ್ನ, ಕೊಲೆ, ದೊಂಬಿ, ಬಲವಂತದ ಹಣ ವಸೂಲಿ ಸೇರಿದಂತೆ ಒಟ್ಟು ಎಂಟು ಪ್ರಕರಣಗಳು ದಾಖಲಾಗಿದ್ದು, 2019ರಿಂದ ರೌಡಿ ಹಾಳೆ ತೆರೆಯಲಾಗಿತ್ತು. ಅಪರಾಧ ಚಟುವಟಿಕೆ ಮುಂದುವರಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಸಲ್ಲಿಸಿದ್ದ ಪ್ರಸ್ತಾವನೆ ಆಧರಿಸಿ ಜಿಲ್ಲಾಧಿಕಾರಿಗಳು ಜೂ.8ರಂದು ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಆದೇಶಿಸಿದ್ದಾರೆ. ಅದರಂತೆ ಶಬ್ಬಿರನನ್ನು ಕೂಡ ಜೂ.9ರಂದು ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.
