Kumta| ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ ದುರಂತ ಘಟನೆ ಬರ್ಗಿ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಂಗಳವಾರ ಸಂಭವಿಸಿದೆ.

ಚಿನ್ಮಯ ಪಟಗಾರ ಅಪಘಾತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತ ಚಿನ್ಮಯ ಪಟಗಾರ ಹಾಗೂ ತಿಲಕ್ ಗೌಡ ಅಂಕೋಲಾದ ಐಟಿಐ ಕಾಲೇಜಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಸ್ಥಳಾಂತರಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಿನ್ಮಯ ಪಟಗಾರ ಮೃತಪಟ್ಟಿದ್ದಾನೆ. ಮತ್ತೋರ್ವ ವಿದ್ಯಾರ್ಥಿ ತಿಲಕ್ ಗೌಡ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರಕರಣ ದಾಖಲಾಗಿದ್ದು, ಡಿಕ್ಕಿ ಹೊಡೆದು (Hit and Run) ಪರಾರಿಯಾದ ವಾಹನ ಹಾಗೂ ಅದರ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.