ಭಟ್ಕಳ: ರಾಷ್ಟ್ರೀಯ ಹೆದ್ದಾರಿ-66ರ ಮುರ್ಡೇಶ್ವರ ಸಮೀಪದ ಬಸ್ತಿ ಜಂಕ್ಷನ್‌ನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ಬಳಿಕ ಸ್ಥಳೀಯರು ಹೆದ್ದಾರಿ ನಾಲ್ಕು ಪಥ ಕಾಮಗಾರಿಯ ಅವೈಜ್ಞಾನಿಕ ವಿನ್ಯಾಸವೇ ಅಪಘಾತಗಳಿಗೆ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.

ಮೃತರನ್ನು ಮುರ್ಡೇಶ್ವರ ಸಮೀಪದ ಸಬ್‌ಪಟ್ಟಿ ನಿವಾಸಿ ಕೃಷ್ಣ ಶಣಿಯಾರ್ ನಾಯ್ಕ (55) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಕೃಷ್ಣ ಶಣಿಯಾರ್ ನಾಯ್ಕ ಅವರು ಭಟ್ಕಳದಿಂದ ಮುರ್ಡೇಶ್ವರದ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದು, ಬಸ್ತಿ ಜಂಕ್ಷನ್‌ನಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಎಸೆಯಲ್ಪಟ್ಟು, ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಸ್ಥಳೀಯರು ಸ್ಥಳಕ್ಕೆ ಆಗಮಿಸಿ, ರಾಷ್ಟ್ರೀಯ ಹೆದ್ದಾರಿ-66ರ ನಾಲ್ಕು ಪಥ ಕಾಮಗಾರಿಯ ಅವೈಜ್ಞಾನಿಕ ಹಾಗೂ ಕಳಪೆ ವಿನ್ಯಾಸದಿಂದ ಈ ಜಂಕ್ಷನ್ ಅಪಘಾತಗಳ ತಾಣವಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಲಾರಿಯಡಿ ಸಿಲುಕಿದ್ದ ಬೈಕ್ ಹಾಗೂ ಮೃತದೇಹವನ್ನು ತೆರವುಗೊಳಿಸಲು ಅಧಿಕಾರಿಗಳಿಗೆ ಅವಕಾಶ ನೀಡಲಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಥವಾ ಕಾಮಗಾರಿ ನಿರ್ವಹಿಸುತ್ತಿರುವ ಐಆರ್‌ಬಿ (IRB) ಸಂಸ್ಥೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಸಾರ್ವಜನಿಕರೊಂದಿಗೆ ಚರ್ಚೆ ನಡೆಸಬೇಕು. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಮರುಕಳಿಸದಂತೆ ಶಾಶ್ವತ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮಾಹಿತಿ ಪಡೆದ ಮುರ್ಡೇಶ್ವರ ಮತ್ತು ಭಟ್ಕಳ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು. ಡಿವೈಎಸ್‌ಪಿ, ಸಹಾಯಕ ಆಯುಕ್ತರು, ತಹಶೀಲ್ದಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಬಳಿಕ ಐಆರ್‌ಬಿ ಸಂಸ್ಥೆಯ ಎಂಜಿನಿಯರ್ ಸ್ಥಳಕ್ಕೆ ಆಗಮಿಸಿ ಚರ್ಚೆ ನಡೆಸಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಘಟನೆ ಸಂಬಂಧ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.