ಕಾರವಾರ: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಅಡಿಕೆ ಲಾರಿಗಳನ್ನು ತಡೆಹಿಡಿದಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಸಮಸ್ಯೆ ಕುರಿತು ನವದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಶಾಸಕ ಹಾಗೂ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಅರಗ ಜ್ಞಾನೇಂದ್ರ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿ.ವೈ. ರಾಘವೇಂದ್ರ, ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ರಾಜ್ಯದ ಪ್ರಮುಖ ಅಡಿಕೆ ಬೆಳೆಗಾರರ ಸಹಕಾರಿ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಮಹಾರಾಷ್ಟ್ರದಲ್ಲಿ ಅಡಿಕೆ ಸಾಗಣೆ ವಾಹನಗಳನ್ನು ತಡೆಹಿಡಿದಿರುವುದರಿಂದ ಲಕ್ಷಾಂತರ ಅಡಿಕೆ ಬೆಳೆಗಾರರು, ಸಹಕಾರಿ ಸಂಸ್ಥೆಗಳು ಮತ್ತು ವ್ಯಾಪಾರಿಗಳು ಸಂಕಷ್ಟಕ್ಕೆ ಸಿಲುಕಿರುವ ಕುರಿತು ಸಭೆಯಲ್ಲಿ ಮುಖ್ಯಮಂತ್ರಿ ಫಡ್ನವೀಸ್ ಅವರ ಗಮನಕ್ಕೆ ತರಲಾಯಿತು.
ವಿಷಯದ ಗಂಭೀರತೆಯನ್ನು ಮನಗಂಡ ಮಹಾರಾಷ್ಟ್ರ ಮುಖ್ಯಮಂತ್ರಿ, ಮುಂದಿನ ದಿನಗಳಲ್ಲಿ ಅಗತ್ಯ ದಾಖಲೆಗಳಿರುವ ಅಡಿಕೆ ಸಾಗಣೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅಡಿಕೆ ಬೆಳೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಲಕ್ಷಾಂತರ ರೈತ ಕುಟುಂಬಗಳ ಜೀವನಾಧಾರವಾಗಿದ್ದು, ಬೆಳೆಗಾರರ ಹಿತಾಸಕ್ತಿಯ ರಕ್ಷಣೆಗಾಗಿ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
