Karwar| ಮುರಿನಕಟ್ಟೆ ವಿಷಯಕ್ಕೆ ಸಂಬಂಧಿಸಿದಂತೆ ಹಿಂದೂ ಪರ ಸಂಘಟನೆಗಳು ನಾಳೆ ಜೂನ್ 5ರಂದು ಭಟ್ಕಳದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಭಟ್ಕಳ ತಾಲೂಕಿನಾದ್ಯಂತ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಜೂನ್ 5ರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಭಟ್ಕಳ ತಾಲೂಕಿನ ವ್ಯಾಪ್ತಿಯ ಎಲ್ಲಾ ಮದ್ಯದ ಅಂಗಡಿಗಳು, ಬಾರ್‌ಗಳು ಹಾಗೂ ಮದ್ಯ ಮಾರಾಟ ಕೇಂದ್ರಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.
ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೆ, ನಿಷೇಧದ ಅವಧಿಯಲ್ಲಿ ಮದ್ಯ ಸಾಗಾಟ, ಸಂಗ್ರಹ ಹಾಗೂ ಮಾರಾಟಕ್ಕೂ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸಾರ್ವಜನಿಕರು ಹಾಗೂ ವ್ಯಾಪಾರಸ್ಥರು ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ.