Yellapur| ಬೆಂಗಳೂರು ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಕೆಲ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿರುವುದನ್ನು ಮಾಜಿ ಸಚಿವ ಹಾಗೂ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ತೀವ್ರವಾಗಿ ಖಂಡಿಸಿದ್ದಾರೆ.
ಬ್ರಾಹ್ಮಣ ಸಮುದಾಯದ ಸಂಪ್ರದಾಯವನ್ನು ಪ್ರಶ್ನಿಸುವ ಹಕ್ಕಾಗಲಿ, ಅಧಿಕಾರವಾಗಲಿ ಯಾರೊಬ್ಬರಿಗೂ ಇಲ್ಲ. ಹಿಂದು ಧರ್ಮದಲ್ಲಿ ಮಂಗಳಸೂತ್ರ, ಜನಿವಾರ, ಶಿವದಾರ ಇವೆಲ್ಲವೂ ಧರ್ಮದ ಆಚರಣೆಗಳು. ದೇಶದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಹಕ್ಕನ್ನು ನೀಡಿದೆ. ಪರೀಕ್ಷಾ ನಿಯಮಗಳ ಹೆಸರಿನಲ್ಲಿ ಯಾವುದೇ ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಧಕ್ಕೆ ತರುವುದು ಖಂಡನೀಯ.
ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಭದ್ರತೆ ಮುಖ್ಯವಾದರೂ, ಅದು ವಿದ್ಯಾರ್ಥಿಗಳ ವೈಯಕ್ತಿಕ ಸ್ವಾತಂತ್ರ್ಯ ಮತ್ತು ಸಂಸ್ಕೃತಿಗೆ ಧಕ್ಕೆಯಾಗಬಾರದು. ಈ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಿ, ಎಲ್ಲ ವಿದ್ಯಾರ್ಥಿಗಳಿಗೂ ಸಮಾನ ಗೌರವ ಮತ್ತು ನ್ಯಾಯ ದೊರಕುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಮನೋಭಾವನೆಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ನಡೆಸುವುದು ಅತ್ಯಾವಶ್ಯಕ ಎಂದು ಹೆಬ್ಬಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
