ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾರವಾರ – ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಕೆ ಸೈಲ್ ಅವರಿಗೆ ಲಿವರ್ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಲು ಕರ್ನಾಟಕ ಹೈಕೋರ್ಟ್ ಗುರುವಾರ ಮತ್ತೆ ವೈದ್ಯಕೀಯ ಜಾಮೀನು ನೀಡಿದೆ.
ಯಕೃತ್ತು ಕಸಿ ಕುರಿತು ಪ್ರತಿ ಎರಡು ವಾರಗಳಿಗೊಮ್ಮೆ ವರದಿ ಸಲ್ಲಿಸುವಂತೆ ಶಾಸಕ ಸತೀಶ್ ಸೈಲ್ ಅವರಿಗೆ ನ್ಯಾಯಾಲಯ ಸೂಚಿಸಿದೆ. ಪ್ರತಿ ಎಂಟು ವಾರಗಳಿಗೊಮ್ಮೆ ಆರೋಗ್ಯ ಪ್ರಗತಿ ವರದಿಯನ್ನು ನ್ಯಾಯಾಲಯದ ಮುಂದೆ ಸಲ್ಲಿಸುವಂತೆಯೂ ಸೂಚಿಸಿದೆ.
ಸತೀಶ್ ಸೈಲ್ ಸಾಕ್ಷಿಗಳ ಮೇಲೆ ಯಾವುದೇ ರೀತಿಯಲ್ಲಿ ಪ್ರಭಾವ ಬೀರಬಾರದು ಅಥವಾ ವಿಚಾರಣೆಯ ಪ್ರಕ್ರಿಯೆಗಳಿಗೆ ಅಡ್ಡಿಪಡಿಸಬಾರದು ಎಂದು ನ್ಯಾಯಾಲಯವು ಒತ್ತಿ ಹೇಳಿದೆ. ಇದರ ಜೊತೆಗೆ, ಶಾಸಕರಿಗೆ ವೈಯಕ್ತಿಕ ಭದ್ರತೆಯೊಂದಿಗೆ 5 ಲಕ್ಷ ರೂ.ಗಳ ಶ್ಯೂರಿಟಿ ಬಾಂಡ್ ಸಲ್ಲಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಕೆ ಸೈಲ್ ಅವರನ್ನು ಕಳೆದ ವರ್ಷ ಸೆಪ್ಟೆಂಬರ್ 9 ರಂದು ಬೆಂಗಳೂರಿನಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಬಂಧಿಸಿದ್ದರು.
ಶಾಸಕ ಸತೀಶ್ ಸೈಲ್ ಅವರು ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾಗ ಬಂಧನ ಮಾಡಲಾಗಿತ್ತು. ಬಳಿಕ ಮಧ್ಯಂತರ ಜಾಮೀನಿನಲ್ಲಿ ಸೈಲ್ ಹೊರಗೆ ಬಂದಿದ್ದರು.
ಇದಕ್ಕೂ ಮೊದಲು, ಅಕ್ರಮ ಕಬ್ಬಿಣದ ಅದಿರು ರಫ್ತು ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ನಿವಾಸದ ಮೇಲೆ ಆಗಸ್ಟ್ 13 ಮತ್ತು 14, 2025 ರಂದು ಇಡಿ ದಾಳಿ ನಡೆಸಿ ಅಕ್ರಮ ಆಸ್ತಿ, ನಗದು ಮತ್ತು ಆಭರಣಗಳನ್ನು ಪತ್ತೆ ಮಾಡಿತ್ತು.
ಇಡಿ ಅಧಿಕಾರಿಗಳು ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದರು. ಸತೀಶ್ ಸೈಲ್ ಒಡೆತನದ ಆಸ್ತಿಗಳನ್ನು ಗುರಿಯಾಗಿಸಿಕೊಂಡು ಕಾರವಾರ, ಗೋವಾ, ಮುಂಬೈ ಮತ್ತು ದೆಹಲಿಯಲ್ಲಿ ಶೋಧ ಕಾರ್ಯಾಚರಣೆಗಳನ್ನು ಸಹ ನಡೆಸಲಾಯಿತು.
ಇಡಿ ಅಧಿಕಾರಿಗಳು ದಾಖಲೆಗಳನ್ನು, ಚಿನ್ನ ಮತ್ತು ಹಣವನ್ನು ಎರಡು ಟ್ರಂಕ್‌ಗಳಲ್ಲಿ ಕೊಂಡ್ಯೊಯ್ದಿದ್ದರು.
2024 ರಅಕ್ಟೋಬರ್ 26 ರಂದು, ಬೇಲೆಕೇರಿ ಅಕ್ರಮ ಕಬ್ಬಿಣದ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದ ಆರು ಪ್ರಕರಣಗಳಲ್ಲಿ ಶಾಸಕ ಸತೀಶ್ ಸೈಲ್ ಅವರಿಗೆ ವಿಶೇಷ ನ್ಯಾಯಾಲಯವು ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು ಮತ್ತು ನ್ಯಾಯಾಲಯವು 44 ಕೋಟಿ ರೂ. ದಂಡವನ್ನು ಸಹ ವಿಧಿಸಿತ್ತು.
ಅಕ್ರಮ ಕಬ್ಬಿಣದ ಅದಿರು ರಫ್ತು ಪ್ರಕರಣಕ್ಕೆ ಸಂಬಂಧಿಸಿದಂತೆ 2010 ರಲ್ಲಿ ಪ್ರಕರಣ ದಾಖಲಾಗಿತ್ತು ಮತ್ತು ನಂತರ ಕೇಂದ್ರ ತನಿಖಾ ದಳ (ಸಿಬಿಐ) ಈ ವಿಷಯದಲ್ಲಿ ಆರೋಪಪಟ್ಟಿ ಸಲ್ಲಿಸಿತು. ಮೊದಲ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಯಿತು.
ಬಳಿಕ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 21, 2024 ರಂದು ಕಬ್ಬಿಣದ ಅದಿರು ಅಕ್ರಮ ರಫ್ತು ಪ್ರಕರಣದಲ್ಲಿ ಸತೀಶ್ ಸೈಲ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿತು.
ಅವರ ಮೇಲ್ಮನವಿಯ ವಿಚಾರಣೆ ಮುಗಿಯುವವರೆಗೂ ಕಾರವಾರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಪ್ರಕಟಿಸದಂತೆ ನ್ಯಾಯಾಲಯವು ಅಧಿಕಾರಿಗಳಿಗೆ ನಿರ್ದೇಶನ ನೀಡಿತು.
ನ್ಯಾಯಾಲಯವು ಅವರನ್ನು ವಿಧಾನಸಭೆ ಅಧಿವೇಶನಕ್ಕೆ ಹಾಜರಾಗದಂತೆ ನಿರ್ಬಂಧಿಸಿತ್ತು. ನಂತರ, ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತ್ತು.
Mla ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು
