Haliyal| ತಾಲೂಕಿನ ಪ್ರಮುಖ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳು ನಿರೀಕ್ಷಿತ ವೇಗದಲ್ಲಿ ಸಾಗದೇ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಅಸಮಾಧಾನ ಹೆಚ್ಚಾಗಿದೆ. ಕಾಳಿನದಿ ನೀರಾವರಿ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ಅಮೃತ್ 2.0 ಯೋಜನೆ ಹಾಗೂ ಪಟ್ಟಣದ ನಿರಂತರ ನೀರು ಪೂರೈಕೆ ಮತ್ತು ಒಳಚರಂಡಿ ಕಾಮಗಾರಿಗಳ ಕುರಿತು ತಾಲೂಕು ಮತ್ತು ಜಿಲ್ಲಾಡಳಿತ ಸ್ಪಷ್ಟ ಮಾಹಿತಿ ನೀಡುತ್ತಿಲ್ಲ ಎಂದು ಕಬ್ಬು ಬೆಳೆಗಾರರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ನಾಗೇಂದ್ರ ಜಿವೋಜಿ ಆರೋಪಿಸಿದರು.
ಪಟ್ಟಣದಲ್ಲಿ ಆಯೋಜಿಸಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮಾರ್ಚ್ ತಿಂಗಳಲ್ಲಿ ಕಬ್ಬು ಬೆಳೆಗಾರರ ಸಂಘ ಹಾಗೂ ಹಿತರಕ್ಷಣಾ ಸಮಿತಿಯವರು ಜಂಟಿಯಾಗಿ ಪಾದಯಾತ್ರೆ ನಡೆಸಿ ಜನಜಾಗೃತಿ ಮೂಡಿಸಿದ್ದನ್ನು ಸ್ಮರಿಸಿದರು. ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಈ ಯೋಜನೆಗಳ ಮಹತ್ವವನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗಿತ್ತು. ನಂತರ ಮಾರ್ಚ್ 16ರಂದು ಹಳಿಯಾಳ ಬಂದ್ ನಡೆಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಶೀಘ್ರದಲ್ಲೇ ಯೋಜನೆಗಳ ಕಾಮಗಾರಿ ಆರಂಭವಾಗುತ್ತದೆ ಎಂದು ಭರವಸೆ ನೀಡಿದ್ದರಿಂದ ರೈತ ಸಂಘಟನೆಗಳು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದವು ಎಂದು ವಿವರಿಸಿದರು.
ಪ್ರತಿಭಟನೆ ನಡೆದು ಸುಮಾರು ಎರಡು ತಿಂಗಳು ಕಳೆದಿದ್ದರೂ ಯಾವುದೇ ಮಹತ್ವದ ಪ್ರಗತಿ ಕಾಣಿಸದಿರುವುದು ಸಾರ್ವಜನಿಕರಲ್ಲಿ ನಿರಾಸೆ ಮೂಡಿಸಿದೆ. ಯೋಜನೆಗಳ ಕುರಿತು ಅಧಿಕಾರಿಗಳು ಯಾವುದೇ ಸ್ಪಷ್ಟ ಮಾಹಿತಿ ನೀಡದೇ ಇರುವುದರಿಂದ ಜನರಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಯಾವ ಯೋಜನೆ ಯಾವ ಹಂತದಲ್ಲಿದೆ, ಕಾಮಗಾರಿ ಯಾವಾಗ ಆರಂಭವಾಗಲಿದೆ, ಪೂರ್ಣಗೊಳ್ಳಲು ಎಷ್ಟು ಸಮಯ ಬೇಕು ಎಂಬ ಮಾಹಿತಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕಾಗಿದೆ. ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ವರ್ಷಗಳಿಂದ ಜನರನ್ನು ಕಾಯಿಸುವ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
ಕಾಳಿನದಿ ನೀರಾವರಿ ಯೋಜನೆಯ ಪ್ರಾಯೋಗಿಕ ಪರಿಶೀಲನೆ ವೇಳೆ ಪೈಪುಗಳು ಒಡೆದು ನೀರು ಸೋರಿಕೆಯಾಗಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ದೊಡ್ಡ ಅನುಮಾನ ಹುಟ್ಟಿಸಿದೆ. ಯೋಜನೆ ಪೂರ್ಣಗೊಳ್ಳುವ ಮುನ್ನವೇ ಪೈಪುಗಳು ಹಾನಿಗೊಳಗಾಗಿರುವುದು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಕಳಪೆ ಕಾಮಗಾರಿಯ ಉದಾಹರಣೆಯಾಗಿದೆ. ಇದೇ ರೀತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿಯೂ ಕೆಲವು ಗ್ರಾಮಗಳಲ್ಲಿ ನೀರು ಪೂರೈಕೆ ಆರಂಭವಾಗುತ್ತಿದ್ದಂತೆಯೇ ಪೈಪ್‌ಗಳು ಒಡೆದು ನೀರು ಪೋಲಾಗುತ್ತಿರುವ ಘಟನೆಗಳು ನಡೆದಿವೆ ಎಂದು ದೂರಿದರು. ಇದರಿಂದ ಸರ್ಕಾರದ ಹಣ ವ್ಯರ್ಥವಾಗುವುದರ ಜೊತೆಗೆ ಜನರಿಗೆ ತೊಂದರೆ ಉಂಟಾಗುತ್ತಿದೆ ಎಂದು ಹೇಳಿದರು.
ಕಳಪೆ ಕಾಮಗಾರಿ ಕುರಿತು ಹಲವು ಬಾರಿ ದೂರುಗಳು ಬಂದಿದ್ದರೂ ಇದುವರೆಗೆ ಯಾವುದೇ ಗುತ್ತಿಗೆದಾರರ ವಿರುದ್ಧ ಅಥವಾ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆ ಕಾರಣವಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಬೃಹತ್ ಯೋಜನೆಗಳ ಗುಣಮಟ್ಟ ಪರಿಶೀಲನೆಗೆ ಆದ್ಯತೆ ನೀಡಬೇಕು. ಜನರ ತೆರಿಗೆ ಹಣದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.
ತಾಲೂಕಿನಲ್ಲಿ ನಡೆಯುತ್ತಿರುವ ಪ್ರಮುಖ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಸಮರ್ಪಕ ಚರ್ಚೆ ನಡೆಯುತ್ತಿಲ್ಲ ಎಂದು ಆರೋಪಿಸಿದ ಅವರು, ಜನಪ್ರತಿನಿಧಿಗಳು ಅಭಿವೃದ್ಧಿ ಕಾಮಗಾರಿಗಳ ಮೇಲಿನ ಗಮನವನ್ನು ಹೆಚ್ಚಿಸಬೇಕಾಗಿದೆ. ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡಲು ಶಾಸಕರು ವಿಶೇಷ ಸಭೆ ಕರೆದು ಯೋಜನೆಗಳ ಪ್ರಗತಿ, ವಿಳಂಬಕ್ಕೆ ಕಾರಣಗಳು ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ವಿವರಿಸಬೇಕು.ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕವೇ ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡರಾದ ಸಾತೇರಿ ಗೋಡೆಮನಿ, ಬೆಳಗಾಂವಕರ, ಕೆಂಚಣ್ಣನವರ, ಬಲಿರಾಮ ಮೋರೆ, ಚಂದ್ರಕಾಂತ ಲಕ್ಕನಗೌಡರ್, ಮಹೇಶ ಪಾಳೇಕರ, ಜೈಪಾಲ ಚಿತ್ತರಗಿ, ಶಾಂತಾರಾಮ ಸೂರ್ಯವಂಶಿ, ಮಂಜುನಾಥ ಶಿಂದೆ, ಗೋವಿಂದ ಗುಮ್ಮಾಳೆ, ತುಕಾರಾಮ್ ಕೋಲೆಕರ ಸೇರಿದಂತೆ ಹಲವು ರೈತ ಮುಖಂಡರು ಹಾಗೂ ಬೆಳೆಗಾರರು ಉಪಸ್ಥಿತರಿದ್ದರು.
