Yellapur|ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಶುಕ್ರವಾರ ಮುಂಜಾನೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಟ್ಯಾಂಕರ್ ಪಲ್ಟಿಯಾದರೂ ಅದೃಷ್ಟವಶಾತ್ ಗ್ಯಾಸ್ ಸೋರಿಕೆಯಾಗದ ಕಾರಣ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರು. ಕೆಲಕಾಲ ವಾಹನ ಸಂಚಾರದಲ್ಲಿ ಎಚ್ಚರಿಕೆ ವಹಿಸಲಾಗಿದ್ದು, ಬಳಿಕ ಪರಿಸ್ಥಿತಿ ಸಹಜಗೊಂಡಿತು.
ಸತತ ಅಪಘಾತಗಳಿಂದ ಹೆಚ್ಚಿದ ಆತಂಕ: ಆರತಿಬೈಲ್ ಘಟ್ಟದಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವುದು ವಾಹನ ಸವಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ನಿನ್ನೆ ಗುರುವಾರವಷ್ಟೇ ಇದೇ ಘಟ್ಟದಲ್ಲಿ ಕ್ರೂಸರ್ ವಾಹನ ಅಪಘಾತಕ್ಕೀಡಾಗಿ ಏಳು ಮಂದಿ ಮೃತಪಟ್ಟ ದುರ್ಘಟನೆ ಇನ್ನೂ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಇದೀಗ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಘಟ್ಟದ ತೀಕ್ಷ್ಣ ತಿರುವುಗಳು, ಇಳಿಜಾರು ರಸ್ತೆ ಹಾಗೂ ಮಳೆಗಾಲದಲ್ಲಿ ರಸ್ತೆ ಜಾರುವ ಸ್ಥಿತಿ ಅಪಘಾತಗಳಿಗೆ ಪ್ರಮುಖ ಕಾರಣವಾಗುತ್ತಿವೆ. ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಚಾಲಕರು ವೇಗ ನಿಯಂತ್ರಿಸಿಕೊಂಡು ಅತ್ಯಂತ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
