Karwar| ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ಹೊನ್ನಾವರ, ಕುಮಟಾ, ಕಾರವಾರ, ಅಂಕೋಲಾ ಸೇರಿದಂತೆ ಹಲವೆಡೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ವೇಳೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ರಾಯಚೂರು, ಉಡುಪಿ, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿಯೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಜನರು ಮಳೆ ಹಾಗೂ ಗಾಳಿಯ ಸಮಯದಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ಮರಗಳ ಕೆಳಗೆ ನಿಲ್ಲುವುದು, ವಿದ್ಯುತ್ ಕಂಬಗಳು ಮತ್ತು ಟಿನ್ ಶೆಡ್‌ಗಳ ಸಮೀಪ ಹೋಗುವುದನ್ನು ತಪ್ಪಿಸಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ.
