Honavar| ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ (ಆರ್ಟಿಒ) ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಓವರ್ಲೋಡ್ ಮೂಲಕ ಭಾರಿ ಗಾತ್ರದ ಶಿಲೆ ಕಲ್ಲು ಸಾಗಿಸುತ್ತಿದ್ದ 17 ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಪೆಣಂಬೂರು ಭಾಗದಿಂದ ಹೊನ್ನಾವರದತ್ತ ಭಾರಿ ಗಾತ್ರದ ಶಿಲೆ ಕಲ್ಲುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಕಲ್ಲುಗಳನ್ನು ತುಂಬಿ ಸಾಗಿಸುತ್ತಿರುವುದು ಅಧಿಕಾರಿಗಳ ಪರಿಶೀಲನೆಯಲ್ಲಿ ಪತ್ತೆಯಾಗಿದೆ.
ಹೊನ್ನಾವರದ ಕಾಸರಕೋಡದಲ್ಲಿ ನಿರ್ಮಾಣ ಹಂತದಲ್ಲಿರುವ ಖಾಸಗಿ ವಾಣಿಜ್ಯ ಬಂದರಿನ ವಿಸ್ತರಣೆ ಕಾಮಗಾರಿಗೆ ಈ ಕಲ್ಲುಗಳನ್ನು ಬಳಸಲಾಗುತ್ತಿದೆ ಎಂದು ತಿಳಿದುಬಂದಿದೆ. ಸಾರಿಗೆ ನಿಯಮ ಉಲ್ಲಂಘನೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಧಕ್ಕೆಯಾಗುವ ರೀತಿಯಲ್ಲಿ ಓವರ್ಲೋಡ್ ಸಾಗಾಟ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 17 ಲಾರಿಗಳನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಓವರ್ಲೋಡ್ ವಾಹನಗಳ ಸಂಚಾರದಿಂದ ರಸ್ತೆಗಳಿಗೆ ಹಾನಿಯಾಗುವ ಜೊತೆಗೆ ಅಪಘಾತಗಳ ಸಾಧ್ಯತೆ ಹೆಚ್ಚಾಗುವುದರಿಂದ ಇಂತಹ ಉಲ್ಲಂಘನೆಗಳ ವಿರುದ್ಧ ನಿರಂತರ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
