ಕುಮಟಾ/ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಓಸಿ ಮಟ್ಕಾ ಜೂಜಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕುಮಟಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ, ಕುಮಟಾ ಪಟ್ಟಣದ ಕೆಎಸ್‌ಆರ್‌ಟಿಸಿ ಡಿಪೋ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗೂಡಂಗಡಿ ವ್ಯಾಪಾರಿ ಗೂಡಾಳ-ಸೊಕನಮಕ್ಕಿ ನಿವಾಸಿ ಮೋಹನ ಬೀರಪ್ಪ ಗೌಡ (43), ಸಾರ್ವಜನಿಕರಿಂದ ಹಣ ಪಡೆದು ಅಂಕೆ ಸಂಖ್ಯೆಗಳ ಮೇಲೆ ಓಸಿ ಮಟ್ಕಾ ಜೂಜಾಟ ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಯಿಂದ ₹870 ನಗದು, ಓಸಿ ಅಂಕೆ ಸಂಖ್ಯೆ ಬರೆದ ಚೀಟಿ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಕೆಪಿ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ.

ಇದೇ ರೀತಿ ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕಿ ನಡುಚಿಟ್ಟೆ ಗ್ರಾಮದ ತೂಗುಸೇತುವೆ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟ್ಕಾ ಜೂಜಾಟ ನಡೆಸುತ್ತಿದ್ದ ಶಿವಾನಂದ ಸತ್ಯನಾರಾಯಣ ನಾಯ್ಕ (52), ಗೂಡಂಗಡಿ ವ್ಯಾಪಾರಿ, ಇವರ ವಿರುದ್ಧ ಪ್ರಕರಣ ದಾಖಲಾಗಿದೆ. ದಾಳಿ ವೇಳೆ ಆರೋಪಿಯಿಂದ ₹820 ನಗದು, ಓಸಿ ಸಂಖ್ಯೆ ಬರೆದ ಚೀಟಿ ವಶಪಡಿಸಿಕೊಳ್ಳಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಕೆಪಿ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.