Karwar| ರಾಜ್ಯದಲ್ಲಿ ಮುಂಗಾರು ಚುರುಕುಗೊಂಡ ಹಿನ್ನೆಲೆ, ಹವಾಮಾನ ಇಲಾಖೆ ಜೂನ್ 9 ಮತ್ತು 10ರಂದು ಕರಾವಳಿ ಹಾಗೂ ಮಲೆನಾಡು ಭಾಗದ ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 40ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಜನರು ನದಿ, ಹೊಳೆ ಹಾಗೂ ತಗ್ಗು ಪ್ರದೇಶಗಳ ಬಳಿ ಅನಗತ್ಯವಾಗಿ ಸಂಚರಿಸದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಸಲಹೆ ನೀಡಲಾಗಿದ್ದು, ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ತಿಳಿಸಿದೆ.
ಇದೇ ವೇಳೆ ರಾಜ್ಯದ ಹಲವು ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ.
