Karwar | ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಅವರನ್ನು ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಪಕ್ಷದ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ.

ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಪದಾಧಿಕಾರಿಗಳನ್ನು ವಿವಿಧ ಜಿಲ್ಲೆಗಳಿಗೆ ಸಂಯೋಜಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಅದರಂತೆ ರೂಪಾಲಿ ಎಸ್. ನಾಯ್ಕ ಅವರಿಗೆ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

ಇದೇ ವೇಳೆ, ಮುಂಬರುವ ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ರೂಪಾಲಿ ಎಸ್. ನಾಯ್ಕ ಹಾಗೂ ಮಾಜಿ ಶಾಸಕ ಸುನೀಲ ನಾಯ್ಕ ಅವರನ್ನು ಜಿಲ್ಲಾ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.

ರೂಪಾಲಿ ಎಸ್. ನಾಯ್ಕ ಅವರು ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕರಾಗಿ ಕ್ಷೇತ್ರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜ್ಯ ಉಪಾಧ್ಯಕ್ಷೆಯಾಗಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಸ ಕೈಗೊಂಡು ಪಕ್ಷದ ಸಂಘಟನೆ ಬಲಪಡಿಸುವ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.

ಸಂಘಟನಾ ಚಟುವಟಿಕೆಯಲ್ಲಿ ಸಕ್ರಿಯ ರೂಪಾಲಿ ಎಸ್. ನಾಯ್ಕ ಅವರು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸಿ ಸಂಘಟನೆಯನ್ನು ಬಲಪಡಿಸುವಲ್ಲಿ ಗುರುತಿಸಿಕೊಂಡಿದ್ದಾರೆ. ರಾಜ್ಯ ಮಟ್ಟದ ಜವಾಬ್ದಾರಿಗಳ ಜೊತೆಗೆ ಜಿಲ್ಲೆಯಲ್ಲಿಯೂ ಪಕ್ಷದ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ.