ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ.ಸುಧೀಂದ್ರ ಕಾರವಾರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿನ ಜೈವಿಕ ಇಂಧನ ಸಂಶೋಧನೆ, ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೈವಿಕ ಇಂಧನ ಸಂಶೋಧನೆ, ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರಗಳು, ಜೈವಿಕ ಇಂಧನ ಉದ್ಯಾನಗಳು, ಸ್ವಯಂ ಸೇವಾ ಸಂಸ್ಥೆಗಳು, ಜೈವಿಕ ಇಂಧನ ಸಂಶೋಧನೆ ಹಾಗೂ ಗುಣಮಟ್ಟ ಖಾತ್ರಿ ಪ್ರಯೋಗ ಶಾಲೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯೊಂದಿಗಿನ ಸಹಯೋಗ ಜೈವಿಕ ಇಂಧನ ಕ್ಷೇತ್ರದ ಬೆಳವಣಿಗೆಗಾಗಿ ಕರ್ತವ್ಯ ನಿರ್ವಹಿಸುತ್ತಿದೆ.‌ ನೂತನ ಜೈವಿಕ ಇಂಧನ ರಚನೆಗೆ ಮತ್ತು ಈ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗಾಗಿ ಪ್ರೋತ್ಸಾಹ ದೊರಕಿಸುವಲ್ಲಿ ಇದು ಪರಿಣಾಮಕಾರಿಯಾಗಿವೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯ ಅವರು ಭಾಗಿಯಾಗಿ ಜಿಲ್ಲಾ ವಿಜ್ಞಾನ ಕೇಂದ್ರದ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿ ಜೈವಿಕ ಇಂಧನ ಸಂಶೋಧನೆ, ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರವು ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿರುವುದರಿಂದ ಕಾರವಾರ ಮತ್ತು ಗೋವಾ ರಾಜ್ಯದ ವಿದ್ಯಾರ್ಥಿಗಳಿಗೆ ಜೈವಿಕ ಇಂಧನ ಕುರಿತು ಅರಿವು ಮೂಡಿಸುವಲ್ಲಿ, ಸಂಶೋಧನಾ ಕಾರ್ಯಗಳನ್ನು ಕೈಗೊಳ್ಳಲು ಹಾಗೂ ಬಯೋಡೀಸಲ್‌ ಉತ್ಪಾದನೆಯನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಲು ತುಂಬಾ ನೆರವಾಗಿದೆ ಎಂದು ಮಾಹಿತಿ ನೀಡಿದರು.

ಈ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್.ಎಲ್‌, ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಅಲ್ಲಾಬಕ್ಷ್, ಮರೈನ್‌ ಇಕೋ ಸಿಸ್ಟಮ್‌ ಸೆಲ್‌ ಕೇಂದ್ರದ ಸಂಯೋಜಕ ರೋಹನ್‌ ಬುಜಲೆ ಸಿಬ್ಬಂದಿ ಹಾಗೂ ವಿಜ್ಞಾನ ಕೇಂದ್ರದ ಅಧಿಕಾರಿಗಳು ಹಾಗೂ ಜೈವಿಕ ಇಂಧನ ಕೇಂದ್ರದ ಸಿಬ್ಬಂದಿಯಾದ ನಿಧಿ ನಾಯಕ್‌ ಇದ್ದರು.