ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಉತ್ತರ ಕನ್ನಡ ಹಾಗೂ ಕಾರವಾರ ನಗರಸಭೆಯ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಸಂಜೆ ಕಾರವಾರದಲ್ಲಿ ಪಂಜಿನ ಮೆರವಣಿಗೆ ಆಯೋಜಿಸಲಾಯಿತು.
ನಗರಸಭೆ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಜಹೀರ್ ಅಬ್ಬಾಸ್ ಚಾಲನೆ ನೀಡಿದರು. ಕಾರವಾರ ನಗರಸಭೆಯ ಪೌರಾಯುಕ್ತ ಜಗದೀಶ್ ಹುಲಗಜ್ಜಿ, ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮೆರವಣಿಗೆಯಲ್ಲಿ ಭಾಗವಹಿಸಿದರು.
ನಗರಸಭೆ ಆವರಣದಿಂದ ಆರಂಭವಾದ ಪಂಜಿನ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.
