ಕಾರವಾರ: ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್‌ನನ್ನು ಆರು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ಶಿರಸಿ ತಾಲೂಕಿನ ಬನವಾಸಿ ಬದನಗೋಡದ ಸಂತೋಷ ತಂದೆ ಫಕ್ಕಿರಪ್ಪ ಬೋವಿವಡ್ಡರ (27) ಎಂಬಾತನೇ ಗಡಿಪಾರು ಮಾಡಲಾದ ರೌಡಿ ಆಸಾಮಿ. ಈತನನ್ನು ಜಿಲ್ಲೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಗೆ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಸಂತೋಷ ವಿರುದ್ಧ ಬನವಾಸಿ ಪೊಲೀಸ್ ಠಾಣೆಯಲ್ಲಿ 2017ರಿಂದ 2026ರವರೆಗೆ ಕಳ್ಳತನ, ಸುಲಿಗೆ, ಅತ್ಯಾಚಾರ ಹಾಗೂ ಪೊಕ್ಸೊ, ಎನ್‌ಡಿಪಿಎಸ್ ಸೇರಿದಂತೆ ಒಟ್ಟು 9 ಪ್ರಕರಣಗಳು ಹಾಗೂ ಶಿರಸಿ ಗ್ರಾಮೀಣ ಮತ್ತು ಶಿರಸಿ ಎನ್‌.ಎಂ. ಪೊಲೀಸ್ ಠಾಣೆಗಳಲ್ಲಿ ತಲಾ ಒಂದರಂತೆ ಒಟ್ಟು 11 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ 10 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಒಂದು ಪ್ರಕರಣ ತನಿಖೆಯ ಹಂತದಲ್ಲಿದೆ.

ಆರೋಪಿಯ ವಿರುದ್ಧ ಬನವಾಸಿ ಪೊಲೀಸ್ ಠಾಣೆಯಲ್ಲಿ ‘ಎ’ ರೌಡಿಶೀಟರ್ ಹಾಳೆ ತೆರೆಯಲಾಗಿದ್ದು, ನಿರಂತರವಾಗಿ ಆತನ ಚಟುವಟಿಕೆಗಳ ಮೇಲೆ ನಿಗಾ ಇರಿಸಲಾಗಿತ್ತು. ಆದಾಗ್ಯೂ, ಆತ ತನ್ನ ಅಪರಾಧ ಚಟುವಟಿಕೆಗಳನ್ನು ಮುಂದುವರಿಸುತ್ತಿದ್ದು, ಸಾರ್ವಜನಿಕ ಶಾಂತಿ, ನೆಮ್ಮದಿ, ಕಾನೂನು ಸುವ್ಯವಸ್ಥೆ ಹಾಗೂ ಆಸ್ತಿಪಾಸ್ತಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಬನವಾಸಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು, ಆರೋಪಿಯನ್ನು ಗಡಿಪಾರು ಮಾಡುವಂತೆ ವಿವರವಾದ ಪ್ರಸ್ತಾವನೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳಿಗೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಅಭಿಯೋಜನೆ ಹಾಗೂ ಪ್ರತಿವಾದಿಗಳ ವಾದಗಳನ್ನು ಆಲಿಸಿ, ಸಮಗ್ರ ಪರಿಶೀಲನೆ ನಡೆಸಿದ ಅಧಿಕಾರಿಗಳು ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ) ಮತ್ತು 55(ಬಿ) ಅಡಿಯಲ್ಲಿ ಸಂತೋಷ ಬೋವಿವಡ್ಡರ್ ನನ್ನು 2027ರ ಜನವರಿ 22ರವರೆಗೆ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡುವಂತೆ 2026ರ ಜುಲೈ 23ರಂದು ಆದೇಶ ಹೊರಡಿಸಿದ್ದಾರೆ.

ಆದೇಶದಂತೆ ಬನವಾಸಿ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿಯನ್ನು ಅತ್ತಿಬೆಲೆ ಪೊಲೀಸ್ ಠಾಣೆಯ ಅಧಿಕಾರಿಗಳ ಮುಂದೆ ಹಾಜರುಪಡಿಸಿ, ಗಡಿಪಾರು ಆದೇಶವನ್ನು ಜಾರಿಗೊಳಿಸಿದ್ದಾರೆ.