ಕಾರವಾರ: ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಜಿಲ್ಲೆಯ ನಾಲ್ಕೂ ಉಪವಿಭಾಗಗಳ ಪೊಲೀಸ್ ಅಧಿಕಾರಿಗಳ ಹೆಸರು, ಭಾವಚಿತ್ರ, ಮೊಬೈಲ್ ಸಂಖ್ಯೆ ಹಾಗೂ ಪೊಲೀಸ್ ಠಾಣೆಗಳ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಬಿಡುಗಡೆ ಮಾಡಿದ್ದಾರೆ.

ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಅಥವಾ ಅಗತ್ಯ ಮಾಹಿತಿ ಪಡೆಯಲು ಸುಲಭವಾಗಿ ಸಂಬಂಧಿತ ಠಾಣೆಯ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸಬಹುದಾದ ಉದ್ದೇಶದಿಂದ ಈ ಮಾಹಿತಿಯನ್ನು ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕೃತ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳಲಾಗಿದೆ. ಅಧಿಕಾರಿಗಳ ಭಾವಚಿತ್ರದೊಂದಿಗೆ ಅವರ ಹುದ್ದೆ ಮತ್ತು ಸಂಪರ್ಕ ಸಂಖ್ಯೆಯನ್ನು ಪ್ರಕಟಿಸಿರುವುದು ಸಾರ್ವಜನಿಕರಿಗೆ ಇನ್ನಷ್ಟು ಆತ್ಮವಿಶ್ವಾಸ ಮೂಡಿಸುವ ಪ್ರಯತ್ನವಾಗಿದೆ.

ತುರ್ತು ಪರಿಸ್ಥಿತಿಯಲ್ಲಿ 112 ಸಹಾಯವಾಣಿ ಲಭ್ಯವಿದ್ದು, ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಸಂಪರ್ಕ ವಿವರಗಳನ್ನು ಪಡೆಯಬಹುದು. ಆದರೆ ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕವೇ ಈ ಮಾಹಿತಿಯನ್ನು ಜನರಿಗೆ ತಲುಪಿಸಿರುವುದು ಇಲಾಖೆಯ ಜನಸ್ನೇಹಿ ಕಾರ್ಯವೈಖರಿಗೆ ಮತ್ತೊಂದು ಉದಾಹರಣೆಯಾಗಿದೆ.

ಈಗಾಗಲೇ ಅಪರಾಧ ಪ್ರಕರಣಗಳಲ್ಲಿ ತ್ವರಿತ ಸ್ಪಂದನೆ, ಆರೋಪಿಗಳ ಶೀಘ್ರ ಬಂಧನ, ರಸ್ತೆ ಸುರಕ್ಷತೆ, ಮಾದಕ ವ್ಯಸನ ವಿರೋಧಿ ಜಾಗೃತಿ ಹಾಗೂ ಸಾರ್ವಜನಿಕರಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಗಳ ಮೂಲಕ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಉತ್ತಮ ಹೆಸರು ಗಳಿಸಿದೆ. ಇದೀಗ ಅಧಿಕಾರಿಗಳ ನೇರ ಸಂಪರ್ಕ ವಿವರಗಳನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡುವ ಮೂಲಕ ಜನರು ಮತ್ತು ಪೊಲೀಸರ ನಡುವಿನ ಅಂತರವನ್ನು ಕಡಿಮೆ ಮಾಡಿ, ‘ಆಪ್ತಮಿತ್ರ ಪೊಲೀಸ್’ ಪರಿಕಲ್ಪನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವತ್ತ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.

