ಮುಂಡಗೊಡ | ತಾಲೂಕಿನ ಕರಗಿನಕೊಪ್ಪ ಗ್ರಾಮದ ಮುರಾರ್ಜಿ ದೇಸಾಯಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಮೇಲೆ ಪೋಷಕರು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಘಟನೆಯ ದೃಶ್ಯಗಳು ಕಾಲೇಜಿನ ಸಿಸಿ ಟಿವಿಯಲ್ಲಿ ಸೆರೆಯಾಗಿವೆ.

ಮೂಲಗಳ ಪ್ರಕಾರ, ಕಳೆದ ಜುಲೈ 12ರ ರಾತ್ರಿ ಇಬ್ಬರು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬನ ಪೋಷಕರು ಕಾಲೇಜಿಗೆ ಆಗಮಿಸಿ, ತಮ್ಮ ಮಗನ ಮೇಲೆ ಹಲ್ಲೆ ನಡೆಸಿದ್ದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಹಲ್ಲೆಯನ್ನು ತಡೆಯಲು ಮುಂದಾದ ಇತರ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿಯ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಕಾಲೇಜಿನ ಪ್ರಾಂಶುಪಾಲರು ಮುಂಡಗೋಡ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಘಟನೆಯ ಸಿಸಿ ಟಿವಿ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಕಾಲೇಜು ಆವರಣದಲ್ಲಿ ಪೋಷಕರಿಂದ ನಡೆದ ಹಲ್ಲೆ ಘಟನೆ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಪೊಲೀಸರು ಪ್ರಕರಣದ ಎಲ್ಲಾ ಆಯಾಮಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.