ದಾಂಡೇಲಿ: ಇಲ್ಲಿನ ಸಾಯಿನಗರದ ಉದ್ಯಾನವನದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ತಡರಾತ್ರಿ ನಡೆದಿದ್ದು, ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಮೃತನನ್ನು ಮಂಜುನಾಥ ಮಲ್ಲೇಶ ನಿಂಬಾಳ್ಕರ (23) ಎಂದು ಗುರುತಿಸಲಾಗಿದೆ. ಈತ ಮೂಲತಃ ದಾಂಡೇಲಿಯ ಗಾಂಧಿನಗರದ ರೈಲ್ವೆ ಹಳಿ ಸಮೀಪದ ನಿವಾಸಿಯಾಗಿದ್ದು, ಕಳೆದ ಮೂರು-ನಾಲ್ಕು ವರ್ಷಗಳಿಂದ ತಾಯಿ ಹಾಗೂ ಸಹೋದರಿಯರೊಂದಿಗೆ ಬೆಂಗಳೂರಿನಲ್ಲಿ ವಾಸಿಸುತ್ತಿದ್ದನು. ಎರಡು-ಮೂರು ದಿನಗಳ ಹಿಂದೆ ದಾಂಡೇಲಿಗೆ ಬಂದಿದ್ದ ಎನ್ನಲಾಗಿದೆ.

ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಕರಣದ ಕುರಿತು ದಾಂಡೇಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.