Karwar| ಕಾರವಾರ ನಗರ ಹಾಗೂ ಚಿತ್ತಾಕುಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಜಿಲ್ಲಾ ಅಧ್ಯಕ್ಷ ಅಕ್ಷಯ ಎಸ್.ಬಿ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ನಗರ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಮೋದಿತ ನಕ್ಷೆಗೆ ವಿರುದ್ಧವಾಗಿ ಮತ್ತು ಅಗತ್ಯ ಪರವಾನಿಗೆ ಪಡೆಯದೇ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿರುವ ಅವರು, ಕೆಲವರು ಅನುಮತಿ ಪಡೆದ ಅಂತಸ್ತಿಗಿಂತ ಹೆಚ್ಚಿನ ಅಂತಸ್ತುಗಳನ್ನು ನಿರ್ಮಿಸಿದ್ದು, ಪಾರ್ಕಿಂಗ್‌ಗೆ ಮೀಸಲಾದ ಜಾಗವನ್ನು ವಾಣಿಜ್ಯ ಮಳಿಗೆಗಳಾಗಿ ಪರಿವರ್ತಿಸಿ ಮಾರಾಟ ಹಾಗೂ ಬಾಡಿಗೆಗೆ ನೀಡಿದ್ದಾರೆ ಎಂದು ದೂರಿದ್ದಾರೆ.

ಇನ್ನು ಕೆಲವು ಕಟ್ಟಡಗಳಲ್ಲಿ ಬೇಸ್‌ಮೆಂಟ್ ಹೆಸರಿನಲ್ಲಿ ವಾಹನ ನಿಲುಗಡೆ ವ್ಯವಸ್ಥೆ ತೋರಿಸಲಾಗಿದ್ದರೂ, ಸಣ್ಣ ವಾಹನಗಳಿಗೂ ಪ್ರವೇಶಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಸದಾಶಿವಗಡದಲ್ಲಿ ಕಾರವಾರ ಅಭಿವೃದ್ಧಿ ಪ್ರಾಧಿಕಾರ ಅಥವಾ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆಯದೇ ಬಹುಮಹಡಿ ಕಟ್ಟಡ ಕಾಮಗಾರಿ ಆರಂಭಿಸಿರುವ ಪ್ರಕರಣಗಳೂ ಸಾಕಷ್ಟು ಇದೆ ಎಂದು ತಿಳಿಸಿದ್ದಾರೆ.

ಬಹುಮಹಡಿ ಕಟ್ಟಡಗಳಲ್ಲಿ ಕಡ್ಡಾಯವಾಗಿ ಇರಬೇಕಾದ ತ್ಯಾಜ್ಯ ಸಂಸ್ಕರಣಾ ಘಟಕ ಹಾಗೂ ಕಸ ವಿಲೇವಾರಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆ ಬದಿಯಲ್ಲಿ ಕಸ ಹಾಕಲಾಗುತ್ತಿದ್ದು, ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ. ಅಲ್ಲದೆ, ಸೀಬರ್ಡ್ ಯೋಜನೆಯಲ್ಲಿ ಕೆಲಸ ಮಾಡುವ ಸುಮಾರು 150ಕ್ಕೂ ಹೆಚ್ಚು ಕಾರ್ಮಿಕರಿಗೆ ಅಗತ್ಯ ಮೂಲಸೌಲಭ್ಯಗಳಿಲ್ಲದೆ ಕೆಲವು ಕಟ್ಟಡಗಳಲ್ಲಿ ಬಾಡಿಗೆ ನೀಡಲಾಗುತ್ತಿದೆ ಎಂದು ಅಕ್ಷಯ ತಿಳಿಸಿದ್ದಾರೆ.

ಈ ಎಲ್ಲ ಪ್ರಕರಣಗಳ ಕುರಿತು ಕಾರವಾರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಚಿತ್ತಾಕುಲ ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘಿಸಿರುವ ಕಟ್ಟಡಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಅವರು ಮನವಿ ಮಾಡಿದ್ದಾರೆ.