Karwar| ಹವಾಮಾನ ಇಲಾಖೆ ಮುನ್ಸೂಚನೆಯಂತೆ ಉತ್ತರಕನ್ನಡ ಜಿಲ್ಲೆಯಲ್ಲಿ ಜೂನ್ 27 ರ ಬೆಳಿಗ್ಗೆ 8.30 ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಸಾರ್ವಜನಿಕರು, ಮೀನುಗಾರರು ಹಾಗೂ ಪ್ರವಾಸಿಗರಿಗೆ ಕೆಲ ಕಟ್ಟಳೆಗಳನ್ನು ಬಿಡುಗಡೆ ಮಾಡಲಾಗಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕೆಗೆ ಹೋಗದಂತೆ ಸೂಚಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಹೋಗದಂತೆ ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ಹೋಗದಂತೆ ಜಾಗ್ರತೆವಹಿಸುವುದು. ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು. ಕೃಷಿಕರು ಮಳೆ, ಸಿಡಿಲಿನಂತಹ ಸಂದರ್ಭದಲ್ಲಿ ಕೃಷಿ ಚಟುವಟಿಕೆಯಿಂದ ದೂರವಿರುವುದು.
ಸಾರ್ವಜನಿಕರು ತಗ್ಗು ಪ್ರದೇಶದಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶದಲ್ಲಿ ವಾಸವಿದ್ದಲ್ಲಿ ಅಥವಾ ಶಿಥಿಲಾವಸ್ಥೆಯಿಂದ ಜಾರುವ ಹಂತದಲ್ಲಿರುವ ಕಂಪೌಂಡ್ ಅಥವಾ ಮನೆಯ ಗೋಡೆ. ಇಂತಹ ದುರ್ಬಲವಾದ ಕಟ್ಟಡದಲ್ಲಿ ವಾಸವಿರುವ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವುದು, ಅಗತ್ಯವಿದ್ದಲ್ಲಿ ಈಗಾಗಲೇ ಸಂಬಂಧಿಸಿದ ತಹಶೀಲ್ದಾರರಿಂದ ಗುರುತಿಸಲ್ಪಟ್ಟ ಕಾಳಜಿ ಕೇಂದ್ರದಲ್ಲಿ ಕಡ್ಡಾಯವಾಗಿ ಆಶ್ರಯ ಪಡೆದುಕೊಳ್ಳುವುದು. ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಕಾಲುಸಂಕ, ಕಿರು ಸೇತುವೆ ಇತ್ಯಾದಿಗಳನ್ನು ದಾಟುವ ಮುನ್ನ ಎಚ್ಚರಿಕೆ ವಹಿಸುವುದು.
ಸಾರ್ವಜನಿಕರಿಗೆ ಈ ಮೇಲಿನ ಅಂಶಗಳಂತೆ ಶಿಥಿಲಾವಸ್ಥೆಯಿರುವ ಅಥವಾ ಕುಸಿತದ ಹಂತದ ಕಂಪೌಂಡ್ ಅಥವಾ ಮನೆಯಗೋಡೆ ಕಂಡುಬಂದಲ್ಲಿ ಈ ಕೆಳಗಿನ ದೂರವಾಣಿಗೆ ಮಾಹಿತಿ ನೀಡುವಂತೆ ಮತ್ತು ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಸಂಖ್ಯೆ 08382-229857ಗೆ ಅಥವಾ ವಾಟ್ಸಪ್ ನಂ: 9483511015 ಅಥವಾ ಆಯಾ ತಾಲೂಕಾ ತಹಶೀಲ್ದಾರರ ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
