ಮಂಡ್ಯ: ರಾಜಕೀಯ ಕ್ಷೇತ್ರ ಕಲುಷಿತಗೊಂಡಿದ್ದು, ಹಣದ ಪ್ರಭಾವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ಜನರ ಕಷ್ಟ-ಸುಖಗಳಿಗೆ ಧ್ವನಿಯಾಗಿ ಕಾರ್ಯನಿರ್ವಹಿಸುವುದಾಗಿ ಅವರು ಸ್ಪಷ್ಟಪಡಿಸಿದರು.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶನಿವಾರ ನಡೆದ ಖಾಸಗಿ ಸಮಾರಂಭದಲ್ಲಿ ಮಾತನಾಡಿದ ಅವರು, ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದರು.
:ಹಿಂದೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಕ್ಷೇತ್ರದ ಜನರೇ ನಮ್ಮನ್ನು ಗೆಲ್ಲಿಸಲು ಹಣ ಸಂಗ್ರಹಿಸಿ ಸಹಾಯ ಮಾಡುತ್ತಿದ್ದರು. ಆದರೆ ಈಗ ಪರಿಸ್ಥಿತಿ ಸಂಪೂರ್ಣ ಬದಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳೇ ಮತದಾರರಿಗೆ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರಾಜಕೀಯ ಸಾಕಷ್ಟು ಕಲುಷಿತಗೊಂಡಿದ್ದು, ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲವಿಲ್ಲದಂತಾಗಿದೆ,’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಪ್ರಸ್ತುತ ತಮ್ಮ ವಯಸ್ಸು 79 ವರ್ಷವಾಗಿದ್ದು, ಸರ್ಕಾರದ ಅವಧಿ ಪೂರ್ಣಗೊಳ್ಳುವ ವೇಳೆಗೆ 81–82 ವರ್ಷವಾಗಲಿದೆ. ಆ ವಯಸ್ಸಿನಲ್ಲಿ ಈಗಿನಂತೆ ಆರೋಗ್ಯ ಮತ್ತು ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೂ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದರು.
1978ರಲ್ಲಿ ತಾಲೂಕು ಮಂಡಳಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ತಮಗೆ 2028ರ ವೇಳೆಗೆ ಐದು ದಶಕಗಳ ರಾಜಕೀಯ ಪಯಣ ಪೂರ್ಣಗೊಳ್ಳಲಿದೆ. ಈ ಅವಧಿಯಲ್ಲಿ ಸೋಲು-ಗೆಲುವು ಎರಡನ್ನೂ ಕಂಡಿದ್ದರೂ, ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ ಹಾಗೂ ಆತ್ಮಸಾಕ್ಷಿಗೆ ದ್ರೋಹ ಮಾಡಿಲ್ಲ ಎಂಬ ತೃಪ್ತಿ ಇದೆ ಎಂದು ಹೇಳಿದರು.
ರಾಜ್ಯದ ಜನತೆ ಕಳೆದ ಐದು ದಶಕಗಳಿಂದ ತಮ್ಮನ್ನು ಪ್ರೀತಿಯಿಂದ ಬೆಳೆಸಿದ್ದು, ಆ ಋಣವನ್ನು ಮರೆಯಲು ಸಾಧ್ಯವಿಲ್ಲ. ಹೀಗಾಗಿ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ಜನಸೇವೆಗೆ ತಮ್ಮ ಮುಂದಿನ ಜೀವನವನ್ನು ಮುಡಿಪಾಗಿಡುವುದಾಗಿ ಸಿದ್ದರಾಮಯ್ಯ ಹೇಳಿದರು.
