ಕಾರವಾರ/ಶಿವಮೊಗ್ಗ: ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಸೇರಿದಂತೆ ಯಾವುದೇ ಚುನಾವಣೆ ಎದುರಾದರೂ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸುವಂತೆ ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ, ಶಿವಮೊಗ್ಗ ಜಿಲ್ಲಾ ಸಂಘಟನಾ ಪ್ರಭಾರಿಯಾದ ರೂಪಾಲಿ ಎಸ್. ನಾಯ್ಕ ಕರೆ ನೀಡಿದರು.

ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ದೇಶದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಪಕ್ಷವನ್ನು ಇನ್ನಷ್ಟು ಬಲಪಡಿಸುವ ಮೂಲಕ ಅವರಿಗೆ ಬೆಂಬಲ ನೀಡುವುದು ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಯಾವುದೇ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ಎಂಬುದಕ್ಕಿಂತ ಪಕ್ಷದ ಗೆಲುವು ಮುಖ್ಯ. ಕಾರ್ಯಕರ್ತರು ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ಅವರು ತಿಳಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಈಗಾಗಲೇ ಬಲಿಷ್ಠವಾಗಿದ್ದು, ಅದನ್ನು ಮತ್ತಷ್ಟು ಗಟ್ಟಿಗೊಳಿಸುವ ಅಗತ್ಯವಿದೆ. ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಹಾಗೂ ಬೂತ್ ಮಟ್ಟದವರೆಗೆ ಪ್ರತಿಯೊಂದು ಘಟಕವೂ ಹೊಸ ಉತ್ಸಾಹದೊಂದಿಗೆ ಪಕ್ಷದ ಸಂಘಟನೆಗಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಎಚ್ಚರ ವಹಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಕೆ. ಜಗದೀಶ್, ಜಿಲ್ಲಾ ಪ್ರಭಾರಿ ಸಿದ್ದರಾಮಣ್ಣ, ವಿಧಾನ ಪರಿಷತ್ ಸದಸ್ಯ ಅರುಣ್, ರಾಜ್ಯ ಪ್ರಕೋಷ್ಠ ಸಂಯೋಜಕ ಹಾಗೂ ಎಸ್‌ಐಆರ್ ರಾಜ್ಯ ಪ್ರಮುಖ ದತ್ತಾತ್ರೇಯ, ವಿಧಾನ ಪರಿಷತ್ ಮಾಜಿ ಸದಸ್ಯ ಕುಮಾರಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ವಿವಿಧ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಹಾಗೂ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ ಜಿಲ್ಲಾ ಸಂಘಟನಾ ಪ್ರಭಾರಿಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ ರೂಪಾಲಿ ಎಸ್. ನಾಯ್ಕ ಅವರನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.