Karwar| ಎಸ್‌ಐಆರ್ (Special Intensive Revision) ಕುರಿತು ಪಕ್ಷದ ಕಾರ್ಯಕರ್ತರು ಜಾಗರೂಕರಾಗಿದ್ದು, ಬಿಎಲ್‌ಎ-2ಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಹಾಗೂ ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.

ನಗರ ಹಾಗೂ ಗ್ರಾಮೀಣ ಮಂಡಲಗಳ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಲಾದ ಬಿಎಲ್‌ಎ-2 ಮತ್ತು ಬೂತ್ ಅಧ್ಯಕ್ಷರ ವಿಶೇಷ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಮತ್ತು ಸೌಲಭ್ಯಗಳನ್ನು ಮನೆ ಮನೆಗೆ ತಲುಪಿಸುವ ಕೆಲಸಕ್ಕೆ ಕಾರ್ಯಕರ್ತರು ಮುಂದಾಗಬೇಕು ಎಂದು ಕರೆ ನೀಡಿದರು. ಎಸ್‌ಐಆರ್ ಕುರಿತು ವಿವರವಾಗಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಎ-2ಗಳು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸುವಂತೆ ಸೂಚಿಸಿದರು. ಪಕ್ಷದ ಬೆಳವಣಿಗೆಯೊಂದಿಗೆ ಕಾರ್ಯಕರ್ತರ ಬೆಳವಣಿಗೆಯೂ ಸಾಧ್ಯವಾಗುತ್ತದೆ. ಬಿಜೆಪಿ ಎಲ್ಲ ಕಾರ್ಯಕರ್ತರ ಪಕ್ಷವಾಗಿದ್ದು, ಅದರ ಮತ್ತಷ್ಟು ಬಲವರ್ಧನೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ ಪ್ರಾಸ್ತಾವಿಕವಾಗಿ ಮಾತನಾಡಿ, ಪಕ್ಷ ಸಂಘಟನೆಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ್ ಗುನಗಿ ಮಾತನಾಡಿ, ಕಾರ್ಯಕರ್ತರು ತಮಗೆ ನೀಡಲಾದ ಜವಾಬ್ದಾರಿಯನ್ನು ಅರಿತು ಅದರಂತೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಉಪಾಧ್ಯಕ್ಷ ಹಾಗೂ ಗ್ರಾಮೀಣ ಪ್ರಭಾರಿ ಗಜಾನನ ಗುನಗಿ ಮಾತನಾಡಿದರು. ವೇದಿಕೆಯಲ್ಲಿ ರಾಜ್ಯ ಪ್ರಕೋಷ್ಟದ ಸುನಿಲ್ ಸೋನಿ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬಳೆ, ಗ್ರಾಮೀಣ ಪ್ರಧಾನ ಕಾರ್ಯದರ್ಶಿಗಳಾದ ಉದಯ ನಾಯ್ಕ್, ಸೂರಜ್ ದೇಸಾಯಿ ಹಾಗೂ ನಗರ ಪ್ರಧಾನ ಕಾರ್ಯದರ್ಶಿ ಅಶೋಕ ಗೌಡ ಉಪಸ್ಥಿತರಿದ್ದರು.

ಸಭೆಯಲ್ಲಿ ಬಿಎಲ್‌ಎ-2, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಮೋರ್ಚಾ ಹಾಗೂ ಬೂತ್ ಅಧ್ಯಕ್ಷರು, ನಗರಸಭೆ ಸದಸ್ಯರು ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಪಕ್ಷದ ಕಾರ್ಯಕರ್ತರು ಭಾಗವಹಿಸಿದರು. ಇದೇ ವೇಳೆ ಅಗಲಿದ ಪಕ್ಷದ ಕಾರ್ಯಕರ್ತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.