ಕ್ರೂಸರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕ್ರೂಸರ್ ನಲ್ಲಿದ್ದ ಆರುಜನ ಸ್ಥಳದಲ್ಲೇ ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಆರತಿ ಬೈಲ್ ಬಳಿ ನಡೆದಿದೆ.

ಮೃತರೆಲ್ಲರು ಧಾರವಾಡ ಮೂಲದವರಾಗಿದ್ದು, ಗೋಕರ್ಣ, ಮುರುಡೇಶ್ವರ ಸೇರಿದಂತೆ ಇನ್ನಿತರ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಧಾರವಾಡದಿಂದ ಹೊರಟಿದ್ದರು ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ವಾಹನದ ಚಾಲಕ ಸಂಜೀವ್ (ಸಂಜಯ) ಅಂಗಡಿ, ಬಸವರಾಜ್, ಅಭಿಷೇಕ್ ಈಶ್ವರ್, ಅಕ್ಷಯ್, ಅಭಿಷೇಕ್ ಹಾಗೂ ಮಂಜುನಾಥ ಚುಲಕಿ ಸೇರಿದಂತೆ ಒಟ್ಟು ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಶಿವರಾಜ್ ದುರ್ಗಪ್ಪ ಮಡಿವಾಳ್, ಚೆನ್ನಬಸಯ್ಯ ಬಸಲಿಂಗಯ್ಯ ಸಂಪಗಾವ ಹಾಗೂ ಸಚಿನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ತೂಫಾನ್ ವಾಹನ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಚಾಲಕ ಸೇರಿ ಒಟ್ಟು ಒಂಬತ್ತು ಮಂದಿ ವಾಹನದಲ್ಲಿ ಪ್ರಯಾಣಿಸುತ್ತಿದ್ದರು.
ಮೃತರೆಲ್ಲರೂ ಧಾರವಾಡ ಮೂಲದವರಾಗಿದ್ದು, ಸ್ವಿಗ್ಗಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದವರು. ಸ್ನೇಹಿತರೆಲ್ಲ ಸೇರಿ ಪ್ರವಾಸಕ್ಕೆ ಹೊರಟಿದ್ದ ವೇಳೆ ಅರಬೈಲ್ ಘಟ್ಟದ ತಿರುವಿನಲ್ಲಿ ಎದುರಿನಿಂದ ಬಂದ ಲಾರಿ ಅವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಇನ್ನು ಕ್ರೂಸರ್ ವಾಹನದಲ್ಲಿ ಒಟ್ಟು ಒಂಬತ್ತು ಜನ ಪ್ರಯಾಣಿಕರಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕ್ರಿಮ್ಸ್ ಗೆ ದಾಖಲಿಸಲಾಗಿದೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ಭೇಟಿ ನೀಡಿದ್ದಾರೆ. ವಾಹನದಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
