ಕಾರವಾರ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಟಾಸ್ಕ್ ಪೋರ್ಸ್ ಸಭೆಯಲ್ಲಿ ಮಂಜೂರಾಗಿರುವ ಕುಡಿಯುವ ನೀರಿನ ಕ್ರಿಯಾ ಯೋಜನೆಗಳನ್ನು ಶೀಘ್ರದಲ್ಲಿ ಅನುಷ್ಠಾನಗೊಳಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿಗಳಿಗೆ ಉತ್ತರಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ ಸೂಚಿಸಿದರು.
ಅವರು ಕಾರವಾರದ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಎಲ್ಲಾ ತಾಲೂಕುಗಳಲ್ಲಿ ಶಾಸಕರ ಟಾಸ್ಕ್ ಪೋರ್ಸ್ ಸಭೆಯಲ್ಲಿ ಮಂಜೂರಾಗಿರುವ ಕುಡಿಯುವ ನೀರಿನ ಕ್ರಿಯಾ ಯೋಜನೆಯ ಎಲ್ಲಾ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆ ನೀಡಿದ್ದು, ಈಗಾಗಲೇ ಗುರುತಿಸುವ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಶೀಘ್ರದಲ್ಲಿ ಎಲ್ಲಾ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ತಿಳಿಸಿದರು.ಇದೇ ಸಂದರ್ಭದಲ್ಲಿ ಅವರು ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸತ್ಯಪ್ಪ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
